

ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿ ರ‍್ಯಾಂಕಿಂಗ್ ಗೊಂದಲಕ್ಕೆ ಹೈಕೋರ್ಟ್ ತೆರೆ ಎಳೆದಿದೆ. 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಪರಿಗಣಿಸಲಾಗದು ಎಂದು ತಿಳಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಳೆದ ಜು.30ರಂದು ಹೊರಡಿಸಿದ್ದ ಟಿಪ್ಪಣಿಯನ್ನು ರದ್ದುಪಡಿಸಿದೆ.
ಜತೆಗೆ, ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿಯ ಶೇ.50 ಅಂಕ ಹಾಗೂ ಸಿಇಟಿಯ ಶೇ.50 ಅಂಕಗಳನ್ನು ಪರಿಗಣಿಸಿ ಹೊಸದಾಗಿ ರ್ಯಾಂಕ್ ಪಟ್ಟಿ ಪ್ರಕಟಿಸುವಂತೆ ಪ್ರಾಧಿಕಾರಕ್ಕೆ ಆದೇಶಿಸಿದೆ. ಇದರಿಂದ, ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯದೆ ‘ಆಂತರಿಕ ಮೌಲ್ಯಮಾಪನದ’ ಆಧಾರದಲ್ಲಿ 2021ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತಿಯ ಪಿಯು ಉತ್ತೀರ್ಣರಾಗಿದ್ದ ವಿದ್ಯಾರ್ಥಿಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಈ ತೀರ್ಪಿನಿಂದಾಗಿ ಈಗಾಗಲೇ ಘೋಷಣೆಯಾಗಿದ್ದ ಸಿಇಟಿ ಫಲಿತಾಂಶ ಅಪ್ರಸ್ತುತಗೊಂಡು, ಸಂಪೂರ್ಣ ರ‍್ಯಾಂಕಿಂಗ್ ಪಟ್ಟಿಯೇ ಬದಲಾಗಲಿದೆ.
2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನ ಸಿಇಟಿ ಫಲಿತಾಂಶಕ್ಕೆ ಪರಿಗಣಿಸದ ಕೆಇಎ ಕ್ರಮ ಪ್ರಶ್ನಿಸಿ 50ಕ್ಕೂ ಅಧಿಕ ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳು ಸಲ್ಲಿಸಿದ್ದ 9 ತಕರಾರು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಶನಿವಾರ ಪ್ರಕಟಿಸಿತು.
ಪ್ರಾಧಿಕಾರಕ್ಕೆ ನಿರ್ದೇಶನ: ಎಲ್ಲ ಅರ್ಜಿಗಳನ್ನು ಮಾನ್ಯ ಮಾಡಿರುವ ನ್ಯಾಯಪೀಠ, ಜು.30ರಂದು ಕೆಇಎ ಹೊರಡಿಸಿದ್ದ ಟಿಪ್ಪಣಿಯನ್ನು ರದ್ದುಪಡಿಸಿದೆಯಲ್ಲದೆ, 2022-23ನೇ ಸಾಲಿನ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಿಇಟಿ ರ‍್ಯಾಂಕಿಂಗ್ ಅನ್ನು ‘ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಕರ್ನಾಟಕ ಅಭ್ಯರ್ಥಿಗಳ ಆಯ್ಕೆ ನಿಯಮಗಳು-2006’ (ಸಿಇಟಿ ನಿಯಮಗಳು-2006)ರ ನಿಯಮ 3 ಮತ್ತು 4ರ ಅನ್ವಯ ರೀಡು ಮಾಡಬೇಕು. 2020-21ನೇ ಸಾಲಿನಲ್ಲಿ ಪಿಯುಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಗಳಿಸಿರುವ ಶೇ.50 ಅಂಕಗಳು ಹಾಗೂ ಸಿಇಟಿಯಲ್ಲಿ ಪಡೆದ ಶೇ.50 ಅಂಕಗಳನ್ನು ಪರಿಗಣಿಸಿ ಹೊಸದಾಗಿ ರ್ಯಾಂಕ್ ಪಟ್ಟಿ ಪ್ರಕಟಿಸಬೇಕು ಎಂದು ಸರ್ಕಾರ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.
ತೀರ್ಪಿನ ಪೂರ್ಣ ಮಾಹಿತಿ ಸಿಕ್ಕ ನಂತರ ಮುಖ್ಯಮಂತ್ರಿ ಹಾಗೂ ಕಾನೂನು ತಜ್ಞರ ಜತೆ ಚರ್ಚೆ ನಡೆಸಿ ಮುಂದೇನು ಮಾಡಬೇಕೆಂದು ತೀರ್ಮಾನ ಮಾಡಲಾಗುತ್ತದೆ. | ಸಿ.ಎನ್. ಅಶ್ವತ್ಥನಾರಾಯಣ ಉನ್ನತ ಶಿಕ್ಷಣ ಸಚಿವ