ಬಾಲ ಮಂಜುನಾಥ ಸ್ವಾಮೀಜಿ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ

highcourt
Published on

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತ ಪ್ರಕರಣದಲ್ಲಿನ ಸಂತ್ರಸ್ತೆಗೆ ಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕುಣಿಗಲ್ ತಾಲ್ಲೂಕಿನ ಹುಲಿಯೂರು ದುರ್ಗ ಹೋಬಳಿ ಹಂಗರಹಳ್ಳಿಯ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ (ಶ್ರೀಮಠ) ಬಾಲ ಮಂಜುನಾಥ ಸ್ವಾಮೀಜಿ (36) ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ.

ಪ್ರಕರಣ ಸಂಬಂಧ ಬಾಲ ಮಂಜುನಾಥ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮಂಗಳವಾರ ವಿಚಾರಣೆ ನಡೆಸಿ ಆದೇಶಿಸಿತು.

ವಿಚಾರಣೆ ವೇಳೆ ಅರ್ಜಿದಾರ ಸ್ವಾಮೀಜಿ ಪರ ವಕೀಲೆ ಲೀಲಾ ಪಿ.ದೇವಾಡಿಗ, ಸ್ವಾಮೀಜಿ ವಿರುದ್ಧ ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಆಧಾರರಹಿತ ಮತ್ತು ಕಾನೂನು ಬಾಹಿರವಾಗಿದೆ. ಅರ್ಜಿದಾರರ ವಿರುದ್ಧ ಸಂಚು ರೂಪಿಸಿ ದುರುದ್ದೇಶಪೂರಿತ ಆರೋಪ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ಈ ಎಲ್ಲ ಆರೋಪಗಳು ಸತ್ಯಕ್ಕೆ ದೂರವಾಗಿದೆ. ಪ್ರಕರಣದಲ್ಲಿ ಸುಖಾಸುಮ್ಮನೆ ಸ್ವಾಮೀಜಿಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ಅಪಾದನೆ ಮಾಡಲಾಗಿದೆ ಎಂದರು.

ಸ್ವಾಮೀಜಿ ಸಂತ್ರಸ್ತ ಬಾಲಕಿಗೆ ಯಾವುದೇ ಬೆದರಿಕೆ ಹಾಕಿದ್ದಾರೆ ಎಂಬ ಬಗ್ಗೆ ದೂರಿನಲ್ಲಿ ಎಲ್ಲೂ ಪ್ರಸ್ತಾಪಿಸಿಲ್ಲ. ಪ್ರಾಸಿಕ್ಯೂಷನ್ ವಿನಾಕಾರಣ ದೂರಿನ ವ್ಯಾಪ್ತಿಯಿಂದ ಆಚೆಗೆ ಸಲ್ಲದ ಆರೋಪಗಳನ್ನು ಹೊರಿಸುತ್ತಿದೆ. ಆದ್ದರಿಂದ, ಎಫ್‌ಐಆರ್ ರದ್ದುಪಡಿಸಬೇಕು ಮತ್ತು ಕುಣಿಗಲ್‌ನ ಹೆಚ್ಚುವರಿ ಸಿವಿಲ್ ಜಡ್ಜ್ (ಹಿರಿಯ ವಿಭಾಗ) ಮತ್ತು ಸಿಜೆಎಂ ಕೋರ್ಟ್‌ನಲ್ಲಿ ಇರುವ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣಾ ಕೋರ್ಟ್ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net