

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮೇಲ್ಮನೆ ಸದಸ್ಯ ಸಿ.ಟಿ.ರವಿ ಅವರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧದ ಬಾಗೇವಾಡಿ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದತಿ ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಅಲ್ಲದೆ, ಪ್ರಕರಣದಲ್ಲಿ ದೂರುದಾರೆಯಾಗಿರುವ ಸಚಿವೆ ಅವರಿಗೆ ಹ್ಯಾಂಡ್ ಸಮನ್ಸ್ ಜಾರಿಗೊಳಿಸಿ ನಿರ್ದೇಶಿಸಿದ ನ್ಯಾಯಪೀಠ, ಅರ್ಜಿಗೆ ದೂರುದಾರರು ಆಕ್ಷೇಪಣೆ ಸಲ್ಲಿಸಬಹುದು ಎಂದು ತಿಳಿಸಿದೆ.
ಇದಕ್ಕೂ ಮುನ್ನ ತನಿಖಾಧಿಕಾರಿಗಳ ಪರ ಹಾಜರಿದ್ದ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎ. ಬೆಳ್ಳಿಯಪ್ಪ, ಅರ್ಜಿದಾರರ ವಿರುದ್ಧ ಬಲವಂತದ ಕ್ರಮಜರುಗಿಸದಂತೆ ಈ ಹಿಂದೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ಇದರಿಂದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣೆಗೆ ಅಡ್ಡಿ ಉಂಟಾಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಸಿ.ಟಿ.ರವಿ ಅವರ ಧ್ವನಿ ಮಾದರಿ ಸಲ್ಲಿಸಬೇಕಾಗಿದೆ. ಅದರಂತೆ ಪ್ರಕ್ರಿಯೆ ಮುಂದುವರಿಯಲು ಅನುಮತಿಸಬೇಕು. ಪೊಲೀಸರು ಅರ್ಜಿದಾರರಿಗೆ ವಿಚಾರಣೆ ಕರೆಯುವುದಿಲ್ಲ ಎಂದು ತಿಳಿಸಿದರು.
ಅದಕ್ಕೆ ಆಕ್ಷೇಪಿಸಿದ ನ್ಯಾಯಮೂರ್ತಿಗಳು. ಒಂದು ಬಾರಿ ಪ್ರಕರಣವು ಹೈಕೋರ್ಟ್‌ನಲ್ಲಿ ಸೀಜ್ ಆದ ಬಳಿಕ ಮತ್ಯಾವುದೇ ಸಂಸ್ಥೆ ಅಥವಾ ನ್ಯಾಯಾಲಯಕ್ಕೆ ಪ್ರಕರಣದಲ್ಲಿ ಮುಂದುವರಿಯಲು ಅನುಮತಿಸಲಾಗದು. ತನಿಖಾಧಿಕಾರಿಗಳು ಮುಂದುವರಿಯಲು ಅನುಮತಿಸಿದರೆ ಹೈಕೋರ್ಟ್ ಮುಂದಿರುವ ಪ್ರಕ್ರಿಯೆಗೆ ಅಡ್ಡಿ ಉಂಟಾಗುತ್ತದೆ ಎಂದರು.
ಬೆಳ್ಳಿಯಪ್ಪ ಉತ್ತರಿಸಿ, ಈ ನಿಯಮವು ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಅನ್ವಯಿಸಲಿದೆ. ಆದರೆ, ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು ಎಂದಷ್ಟೇ ಹೈಕೋರ್ಟ್ ಆದೇಶಿಸಿದೆ. ಅದಕ್ಕಾಗಿ ಮಧ್ಯಂತರ ಆದೇಶ ತೆರವುಗೊಳಿಸಬೇಕು ಎಂದು ಕೋರಿದರು.
ಆಗ ನ್ಯಾಯಮೂರ್ತಿಗಳು, ಹಾಗಾದರೆ ಈಗ ವಿಚಾರಣಾ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡುತ್ತೇನೆ ಎಂದು ತಿಳಿಸಿ ಆ ಬಗ್ಗೆ ಆದೇಶ ಮಾಡಿದರು. ಜತೆಗೆ ಪ್ರಕರಣದಲ್ಲಿ ಸಾಕಷ್ಟು ವಿಚಾರಗಳು ಅಡಗಿರುವುದರಿಂದ ಆ ಬಗ್ಗೆ ಪರಿಶೀಲಿಸಿ ಉತ್ತರಿಸಬೇಕಾಗಿದೆ. ಇದರಿಂದ ಶೀಘ್ರಗತಿಯಲ್ಲಿ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳಲಾಗದು ಎಂದು ತಿಳಿಸಿ ಅರ್ಜಿ ವಿಚಾರಣೆಯನ್ನು ಫೆ.20ಕ್ಕೆ ಮುಂದೂಡಿತು.