

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ಡಿಎಲ್) ಟೆಂಡರ್ಗೆ ಸಂಬಂಧಿಸಿದ ಲಂಚದ ಪ್ರಕರಣದಲ್ಲಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಅವರ ಪ್ರಶಾಂತ್ ಮಾಡಾಳ್ ಬಂಧಿತವಾಗಿದ್ದರೆ, ಶಾಸಕರು ನಾಪತ್ತೆಯಾಗಿದ್ದಾರೆ. ಬಿಜೆಪಿ ಶಾಸಕನ ವಿರುದ್ಧ ಗಂಭೀರ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸಿಎಂ ರಾಜೀನಾಮೆಗೆ ಆಗ್ರಹಿಸಿ, ಇಂದು ಸಿಎಂ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಮುಂದಾಗಿತ್ತು. ಆದರೆ, ಕಾಂಗ್ರೆಸ್ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.
ಸಿಎಂ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಿರ್ಧರಿಸಿ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮಾಜಿ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಾರ್ಯಕರ್ತರೊಂದಿಗೆ ಸಿಎಂ ಬೊಮ್ಮಾಯಿ ನಿವಾಸದತ್ತ ಬಂದಿದ್ದರು. ಅವರನ್ನು ತಡೆದಿದ್ದಕ್ಕೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಕಾಂಗ್ರೆಸ್ ಮುತ್ತಿಗೆ ಯತ್ನಿಸಲು ಆಗಮಿಸಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಾಂಗ್ರೆಸ್ ನಾಯಕರನ್ನು ನಗರ ಪೊಲೀಸರು ತಮ್ಮ ವಶಕ್ಕೆ ಪಡೆದು ಹೈಗ್ರೌಂಡ್ ಠಾಣೆಗೆ ಕರೆತರುವ ಮೂಲಕ ಸಿಎಂ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕುವ ಕಾಂಗ್ರೆಸ್ ಯತ್ನವನ್ನು ವಿಫಲಗೊಳಿಸಿದರು.