ಕುಮಾರ್ ಸ್ವಾಮಿಗೆ ಹೈ ರಿಲೀಫ್

Published on

 ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧದ  ಎಫ್ಐಆರ್  ಈಗಾಗಲೇ ತಡೆ ನೀಡಲಾಗಿದ್ದು, ಅದೇ ಆರೋಪದಲ್ಲಿ ಮಂಜೂರಾಗಿದ್ದ ನಿರೀಕ್ಷಣಾ ಜಾಮೀನು ರದ್ಧತಿಗೆ ಕೋರಿ ಅರ್ಜಿ ಸಲ್ಲಿಸಲಾಗದು ಎಂದು ಹೈಕೋರ್ಟ್ ಹೇಳಿದೆ.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ಗೆ ಅಕ್ರಮವಾಗಿ ಜಮೀನನ್ನು ಗಣಿಗಾರಿಕೆಗೆ ನೀಡಿದ ಆರೋಪ ಸಂಬಂಧ ಈಗಾಗಲೇ ಮಂಜೂರಾಗಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಲೋಕಾಯುಕ್ತ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮನವಿ ಅಮಾನತ್ತಿನಲ್ಲಿಡಬೇಕು ಎಂದು ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ಗೆ ಗಣಿ ಗುತ್ತಿಗೆ ನೀಡಿದ ಪ್ರಕರಣದಲ್ಲಿ ಷರತ್ತುಗಳ ಅನ್ವಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಈ ಷರತ್ತುಗಳನ್ನು ಉಲ್ಲಂಘಿಸಿ ಅರ್ಜಿದಾರ ಆರೋಪಿಯು ತನಿಖಾಧಿಕಾರಿಯ ವಿರುದ್ಧ ಆರೋಪಗಳನ್ನು ಮಾಡಿದ್ದು, ಬೆದರಿಕೆ ಹಾಕಿದ್ದಾರೆ ಎಂಬ ಆರೋಪವಿದೆ. ಆದರೆ, ಬೆದರಿಕೆ ಹಾಕಿದ ಆರೋಪ ಸಂಬಂಧ ಅರ್ಜಿದಾರರ ವಿರುದ್ದ ಎಫ್ಐಆರ್ ದಾಖಲಾಗಿದ್ದು, ಇದಕ್ಕೆ ಹೈಕೋರ್ಟ್‌ನ ಮತ್ತೊಂದು ಪೀಠ ತಡೆ ನೀಡಿದೆ.

ಅಲ್ಲದೆ, ತನಿಖಾ ಮುಖ್ಯಸ್ಥರಿಗೆ ಬೆದರಿಕೆ ಹಾಕುವ ಮೂಲಕ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ವಿಧಿಸಿರುವ ಷರತ್ತುಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ನಿರೀಕ್ಷಣಾ ಜಾಮೀನು ರದ್ದು ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ. ಆದರೆ, ಇದೇ ಆರೋಪದ ಎಫ್ಐಆರ್ ತಡೆಯಿರುವ ಸಂದರ್ಭದಲ್ಲಿ ನಿರೀಕ್ಷಣಾ ಜಾಮೀನು ರದ್ದುಕೋರಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು

ಇದಕ್ಕೆ ಆಕ್ಷೇಪಿಸಿದ ಲೋಕಾಯುಕ್ತ ಪರ ವಕೀಲರು, ಶ್ರೀಸಾಯಿ ಮಿನರಲ್ಸ್ಗೆ ಗಣಿಕಾರಿಕೆಗೆ ಅನುಮತಿ ನೀಡಿದ ಆರೋಪದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ತನಿಖಾ ಸಂಸ್ಥೆ ಮುಖ್ಯಸ್ಥರಿಗೆ ಬೆದರಿಕೆ ಹಾಕುವ ಮೂಲಕ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಆದ್ದರಿಂದ ನಿರೀಕ್ಷಣಾ ಜಾಮೀನು ರದ್ದುಕೋರಿರುವುದಾಗಿ ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net