

ಬೆಂಗಳೂರು: ಚುನಾವಣಾ ಪ್ರಚಾರದ ವೇಳೆ ಮತದಾರರಿಗೆ ಆಮಿಷವೊಡ್ಡುವ ರೀತಿಯಲ್ಲಿ ಭಾಷಣ ಮಾಡಿದ್ದ ಆರೋಪ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನುಹೈಕೋರ್ಟ್ ರದ್ದುಪಡಿಸಿ ಸೋಮವಾರ ಆದೇಶಿಸಿದೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ತಮ್ಮ ವಿರುದ್ಧ ವಿಜಯನಗರ ಜಿಲ್ಲೆ ಹರಪನಹಳ್ಳಿ ಠಾಣಾ ಪೊಲೀಸರು ದಾಖಲಿಸಿರುವ ಪ್ರಕರಣ ಹಾಗೂ ಅದರ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ಜೆ.ಪಿ. ನಡ್ಡಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
ಭಾಷಣದ ಮೂಲಕ ಮತದಾರರಿಗೆ ಆಮಿಷ ಮತ್ತು ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಅರ್ಜಿದಾರರ ವಿರುದ್ಧ ಆರೋಪಿಸಲಾಗಿದೆ. ಆದರೆ, ಅದನ್ನು ಸಾಬೀತುಪಡಿಸುವ ಅಂಶಗಳು ದೂರುದಾರರ ಬಳಿ ಇಲ್ಲ ಹಾಗೂ ನಡ್ಡಾ ಅವರ ಭಾಷಣ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿದ್ದ ಬಗ್ಗೆಯೂ ಸಾಕ್ಷೃಗಳಿಲ್ಲ. ಪ್ರಕರಣ ದಾಖಲಿಸಲು ಮ್ಯಾಜಿಸ್ಟ್ರೇಟ್ ಅವರಿಂದ ಅನುಮತಿಯೂ ಪಡೆದುಕೊಂಡಿಲ್ಲ. ಹೀಗಿದ್ದರೂ ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿದ ವಿಚಾರಣಾ ನ್ಯಾಯಾಲಯದ ಕ್ರಮ ದೋಷಪೂರಿತವಾಗಿದೆ ಎಂಬ ಅರ್ಜಿದಾರರ ಪರ ವಕೀಲರು ವಾದ ಪುರಸ್ಕರಿಸಿದ ಹೈಕೋರ್ಟ್ ಈ ಆದೇಶ ನೀಡಿದೆ.
ಏನಿದು ಪ್ರಕರಣ?
ಕಳೆದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ೨೦೨೩ರ ಮೇ ೭ರಂದು ಹರಪನಹಳ್ಳಿಯಲ್ಲಿಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದ ಜೆ.ಪಿ. ನಡ್ಡಾ, ‘ಡಬಲ್ ಇಂಜಿನ್ ಸರ್ಕಾರ ಬಂದರೆ ಕೇಂದ್ರದ ಯೋಜನೆಗಳೆಲ್ಲ ರಾಜ್ಯದಲ್ಲಿ ಮಂದುವರಿಯುತ್ತವೆ. ಚುನಾವಣೆಯಲ್ಲಿ ಬಿಜೆಪಿ ಸೋತರೆ ಕೇಂದ್ರ ಸರ್ಕಾರದಿಂದ ದೊರೆಯುವ ಯೋಜನೆಗಳಿಂದ ಮತದಾರರು ವಂಚಿತರಾಗಲಿದ್ದೀರಿ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಸೇರಿ ಕೇಂದ್ರದ ಹಲವು ಯೋಜನೆಗಳು ಬಂದ್ ಆಗಲಿವೆ. ನಿಮಗೆ ಅಭಿವೃದ್ಧಿ ಬೇಕಾದರೆ ಬಿಜೆಪಿ ಗೆಲ್ಲಿಸಬೇಕು’ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಚುನಾವಣಾಧಿಕಾರಿಗಳು ಹರಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು.