

ಬೆಂಗಳೂರು: ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದ ಖ್ಯಾತ ಇತಿಹಾಸಕಾರ ಷ.ಶೆಟ್ಟರ್ (85) ಶುಕ್ರವಾರ ನಸುಕಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಶ್ವಾಸಕೋಸದಲ್ಲಿ ನೀರು ತುಂಬಿದ್ದ ಪರಿಣಾಮ ಅವರು ವಾರದಿಂದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಸ್ವಗೃಹ ಭೂಪಸಂದ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕೈಗೊಳ್ಳಲಾಗಿದೆ.
ಇತಿಹಾಸ ಹಾಗೂ ಪ್ರಾಚೀನ ಲಿಪಿಗಳ ಬಗ್ಗೆ ಆಳವಾದ ಸಂಶೋಧನೆ ನಡೆಸಿದ್ದರು. ಸಾವನ್ನು ಸ್ವಾಗತಿಸಿ ಎಂಬ ಕೃತಿಯನ್ನು ರಚಿಸಿದ್ದರು.
ಹುಟ್ಟೂರು ಬಳ್ಳಾರಿ: ಇತಿಹಾಸ ಸಂಶೋಧನೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹೆಸರು ಗಳಿಸಿದ್ದ ಷ.ಶೆಟ್ಟರ್ ಬಳ್ಳಾರಿ ಜಿಲ್ಲೆಯ ಹಂಪಸಾಗರದಲ್ಲಿ 1935 ಡಿ.11ರಲ್ಲಿ ಜನಿಸಿದರು. ಪ್ರಾಥಮಿಕ ವಿದ್ಯಾಭ್ಯಾಸವನ್ನು ಬಳ್ಳಾರಿಯಲ್ಲಿ ಮುಗಿಸಿದ ಅವರು ಮೈಸೂರು, ಧಾರವಾಡ ಮತ್ತು ಕೇಂಬ್ರಿಡ್ಜ್‌ನಲ್ಲಿ ಉನ್ನತ ಅಧ್ಯಯನ ನಡೆಸಿದರು. ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡದ ಬಗ್ಗೆ 27ಕ್ಕೂ ಅಧಿಕ ಸಂಶೋಧನಾ ಕೃತಿ ರಚಿಸಿದ್ದಾರೆ.
ರಾಷ್ಟ್ರದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಬೋಧನೆ ಮಾಡಿರುವ ಅವರು, ಭಾರತೀಯ ಕಲಾ ಇತಿಹಾಸ ಸಂಸ್ಥೆ ನಿರ್ದೇಶಕರಾಗಿ ನೇಮಕಗೊಂಡಿದ್ದರು. ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರೀಸರ್ಚ್ ಅಧ್ಯಕ್ಷರಾಗಿದ್ದರು.
ಬೆಂಗಳೂರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ ಸ್ಟಡೀಸ್‌ನ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು. ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ದಕ್ಷಿಣ ಭಾರತ ಶಾಖೆಯ ನಿರ್ದೇಶಕರಾಗಿ ದುಡಿದಿದ್ದರು.
ಇತಿಹಾಸದ ಸಂಶೋಧನೆಗಾಗಿ ಷ.ಶೆಟ್ಟರ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್ ಪುರಸ್ಕರ ದೊರೆತಿದೆ. ಕುಂದಕುಂದ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ರನ್ನ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಸಂದಿವೆ.