ರಾಜ್ಯದಲ್ಲಿ ಜೂನ್​ 7 ಕ್ಕೂ ಮುಂದಕ್ಕೆ ಲಾಕ್ಡೌನ್ ವಿಸ್ತರಣೆ ? ಗೃಹ ಸಚಿವ ಬೊಮ್ಮಾಯಿ ಹೇಳಿದ್ದೇನು ?

basavaj bommai
Published on

ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ ಜೂನ್ 7 ರವರೆಗೆ ಜಾರಿಯಲ್ಲಿರುವ ಲಾಕ್ಡೌನ್ಅನ್ನು ಮತ್ತೂ ಮುಂದಕ್ಕೆ ವಿಸ್ತರಣೆ ಮಾಡುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂತ್ರಿಮಂಡಲದ ಸದಸ್ಯರೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೃಹ ಖಾತೆ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಕೇಂದ್ರ ಗೃಹ ಇಲಾಖೆಯ ಹೊಸ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಚಿವರ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂದರು. ಜೂನ್ 7 ರವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಾದ ಲಾಕ್ಡೌನ್ ಜಾರಿಯಲ್ಲಿ ಇರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ ಕೇಂದ್ರ ಗೃಹ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಜೂನ್ 30ರವರೆಗೆ ಬಿಗಿ ಕ್ರಮಗಳು ಇರಬೇಕು ಅಂತ ಹೇಳಿರುವುದರಿಂದ ಇದನ್ನು ಯಾವ ರೀತಿ ಜಾರಿ ಮಾಡಬೇಕು ಎಂಬುದರ ಕುರಿತು ಮುಖ್ಯಮಂತ್ರಿಗಳು ಸಚಿವರ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಬೊಮ್ಮಾಯಿ ವಿವರಿಸಿದರು.

ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಇನ್ನೂ ಕಡಿಮೆಯಾಗಿಲ್ಲ. ಅದು ಶೇಕಡ ೧೦ ಕ್ಕಿಂತ ಕಡಿಮೆ ಆಗಬೇಕಾಗಿದೆ. ಗ್ರಾಮೀಣ ಪ್ರದೇಶದಲ್ಲಿಯೂ ಕೋವಿಡ್ ಪ್ರಮಾಣ ಮತ್ತು ಸಾವುಗಳ ಸಂಖ್ಯೆ ನಿಯಂತ್ರಣಕ್ಕೆ ಬರಬೇಕು. ಆಗ ಮಾತ್ರ ಕೋವಿಡ್ ಹತೋಟಿಗೆ ಬರಲು ಸಾಧ್ಯ. ಆಗ ನಮ್ಮ ರಾಜ್ಯದಲ್ಲಿರುವ ಆಸ್ಪತ್ರೆಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಲಾಕ್ಡೌನ್ ನಷ್ಟಕ್ಕೆ ಪರಿಹಾರ : ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾಗಿರುವ 11 ಸಾವಿರ ಕೋಟಿ ರೂ.ಗಳ ಜಿಎಸ್​​ಟಿ ಪರಿಹಾರವನ್ನು ನೀಡುವಂತೆ ಕೇಂದ್ರಕ್ಕೆ ಒತ್ತಾಯ ಮಾಡಲಾಗಿದೆ. ಈ ವರ್ಷ ಮತ್ತೆ ಕೋವಿಡ್ ಬಂದಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ರಾಜ್ಯದ ಆರ್ಥಿಕತೆ ಚೇತರಿಸಿಕೊಂಡಿತ್ತು. ಆದರೆ ಈಗ ಮತ್ತೆ ಲಾಕ್ ಡೌನ್ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ 2-3 ತಿಂಗಳು ಜಿಎಸ್​​ಟಿ ಸಂಗ್ರಹ ಕಡಿಮೆಯಾಗುತ್ತದೆ. ಹೀಗೆ ಲಾಕ್ಡೌನ್ ನಲ್ಲಿ ಕಡಿಮೆಯಾಗುವ ಜಿಎಸ್​​ಟಿ ಕೊರತೆಯನ್ನು ತುಂಬಿಕೊಡುವಂತೆ ಎಲ್ಲ ರಾಜ್ಯಗಳು ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಒತ್ತಾಯ ಮಾಡಿದವು‌. ಕರ್ನಾಟಕದಿಂದ ನಾನು ಕೂಡ ಇದೇ ಒತ್ತಾಯ ಮಾಡಿದ್ದೇನೆ. ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ. ಜಿಎಸ್​​ಟಿಯಿಂದ ಎಷ್ಟು ಪರಿಹಾರ ಕೊಡಬೇಕು ? ಸಾಲ ಪಡೆಯಲು ಅನುಮತಿ ನೀಡಬೇಕಾ? ಇದನ್ನು ಹೊರತುಪಡಿಸಿ ಉಳಿದ ಪರಿಹಾರ ಹಣವನ್ನು ಯಾವ ರೂಪದಲ್ಲಿ ನೀಡಲು ಸಾಧ್ಯ ಎಂಬುದರ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆಂದು ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಒಂದೆರಡು ದಿನಗಳಲ್ಲಿ ಸತ್ಯ ಹೊರಬರಲಿದೆ. ಪ್ರಕರಣದ ಹಿನ್ನೆಲೆಗೆ ಸ್ಪಷ್ಟ ರೂಪ ಸಿಗಲಿದೆ ಎಂದು ಗೃಹ ಸಚಿವ ಬೊಮ್ಮಾಯಿ ಈ ಸಂದರ್ಭದಲ್ಲಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net