ಶಿಶು ಅಭಿವೃದ್ಧಿ ಯೋಜನೆಗೆ ಹಣ ಮೀಸಲಿಗೆ ಆಗ್ರಹ

Honnali, pleading, submission,
Published on

ಹೊನ್ನಾಳಿ: ಕೇಂದ್ರ ಬಜೆಟ್‌ನಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ ಸಾಕಷ್ಟು ಹಣಕಾಸು ಮೀಸಲಿಡುವುದು ಸೇರಿದಂತೆ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲೂಕು ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮೂಲಕ ಕೇಂದ್ರ ವಿತ್ತ ಸಚಿವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಡಿ. ಲತಾಬಾಯಿ ಮಾತನಾಡಿ, ರಾಜ್ಯದ ಅಂಗನವಾಡಿಗಳನ್ನು ಬಲಪಡಿಸಲು ಮತ್ತು ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಶಾಸನಬದ್ಧ ಸೌಲಭ್ಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು 2024-25ರ ಮುಂಗಡಪತ್ರ ಶೀಘ್ರವೇ ಮಂಡಿಸಲಿದ್ದು, ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನೆಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಮನವಿ ಮಾಡಿದರು.

ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಮತ್ತು ಮಕ್ಕಳು ಅತಿ ಹೆಚ್ಚು ಅಪೌಷ್ಟಿಕತೆ ಎದುರಿಸುತ್ತಿದ್ದಾರೆ. ಈ ಕಾರಣಕ್ಕಾಗಿ ನಮ್ಮ ದೇಶದಲ್ಲಿ ಪ್ರತಿ ವರ್ಷ ಸರಾಸರಿ ಆರು ವರ್ಷದೊಳಗಿನ ಅಂದಾಜು 9 ಲಕ್ಷ ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂದು ಹೇಳಿದರು.

ಕಳೆದ ಐದು ದಶಕಗಳಿಂದ ಶ್ರಮಿಸುತ್ತಿರುವ ಅಂದಾಜು 26 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಕಾರ್ಮಿಕರನ್ನಾಗಿ ಗುರುತಿಸಲು ಕೇಂದ್ರ ಸರ್ಕಾರ ಸಿದ್ಧವಿಲ್ಲದಿರುವುದು ನಾಚಿಕೆಗೇಡಿನ ಸಂಗತಿ. ಆದ್ದರಿಂದ ಕನಿಷ್ಠ ವೇತನ, ಸಾಮಾಜಿಕ ಭದ್ರತೆ, ಪಿಂಚಣಿ ನೀಡುವುದು ಮತ್ತಿತರ ಶಿಫಾರಸುಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಸಂಘದ ಕಾರ್ಯದರ್ಶಿ ಎಸ್.ಎಚ್. ಗೀತಾ, ನಾಗರತ್ನಮ್ಮ, ಪದಾಧಿಕಾರಿಗಳಾದ ಕವಿತಾ, ಅನ್ನಪೂರ್ಣ, ಗಂಗಮ್ಮ, ಸುವರ್ಣಾ, ದಾಕ್ಷಾಯಣಿ, ಪೂವಮ್ಮ, ಶೃತಿ, ರೂಪಾ, ಶಶಿಕಲಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net