

ಹಾವೇರಿ: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ದುರಂತ ಸಾವಿಗೀಡಾಗಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಇಂದು (ಜೂನ್ 28) ಬೆಳ್ಳಂಬೆಳಗ್ಗೆ ಸಂಭವಿಸಿದೆ.
ಟಿಟಿ ವಾಹನದಲ್ಲಿ 15ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಡಿಕ್ಕಿಯ ರಭಸಕ್ಕೆ ಟಿಟಿ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮೃತದೇಹಗಳು ಅಪ್ಪಚ್ಚಿಯಾಗಿವೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದ್ದು, ಓರ್ವ ಬಾಲಕನಿಗೆ ಗಂಭೀರ ಗಾಯವಾಗಿದೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಇರುವ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರೆಲ್ಲರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದರ್ಶನ ಮಾಡಿಕೊಂದು ಸ್ವಗ್ರಾಮಕ್ಕೆ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಸದ್ಯ ಟಿಟಿ ವಾಹನದಲ್ಲಿ ಸಿಲುಕಿಕೊಂಡಿರುವ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಹೊರ ತೆಗೆಯುತ್ತಿದ್ದಾರೆ. ಅಲ್ಲದೆ, ಮೃತರ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಂತವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.