ಹಾವೇರಿ: ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ರಾಜ್ಯದ 24 ಜಿಲ್ಲೆಗಳಿಗೆ ತೋಟಗಾರಿಕೆಯ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಕೃಷಿಕರಿಗೆ ಶ್ರೇಷ್ಠ ತೋಟಗಾರಿಕಾ ರೈತ-ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ 2023-24 ನೇ ಸಾಲಿನಲ್ಲಿ ಡಿಸೆಂಬರ್ 23ರಿಂದ 25 ರವರೆಗೆ ತೋಟಗಾರಿಕಾ ಮೇಳ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ಅಭ್ಯರ್ಥಿಗಳು ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದ ಯಾವುದೇ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಮತ್ತು ಐಸಿಎಆರ್ ಪ್ರಶಸ್ತಿಗಳನ್ನು ತಮ್ಮ ಹಾಗೂ ತಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಪಡೆದಿರಬಾರದು. ನಿಗದಿತ ಅರ್ಜಿ ನಮೂನೆಯಲ್ಲಿ ಸಂಪೂರ್ಣ ವಿವರಗಳನ್ನು ಒಳಗೊಂಡ ಮಾಹಿತಿಯನ್ನು ನೀಡಬೇಕು.
ಆಸಕ್ತ ಹಾವೇರಿ ಜಿಲ್ಲೆಯ ರೈತ/ರೈತ ಮಹಿಳೆಯರು ಅರ್ಜಿ ನಮೂನೆಯನ್ನು ದಾನವೀರ ಸಿರಸಂಗಿ ಶ್ರೀ ಲಿಂಗರಾಜ ದೇಸಾಯಿ ತೋಟಗಾರಿಕಾ ಅಭಿಯಾಂತ್ರಿಕ ಮತ್ತು ಆಹಾರ ತಂತ್ರಜ್ಞಾನ ಮಹಾವಿದ್ಯಾಲಯ, ದೇವಿಹೊಸೂರು ಕಚೇರಿಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ನ. 6 ರೊಳಗಾಗಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.