

ಶಿವಮೊಗ್ಗ: ಕನಿಷ್ಠ ಬೆಂಬಲ ಬೆಲೆ ಕಾನೂನು ಖಾತರಿ ಪಡಿಸುವುದು, ರೈತರ ಮೇಲಿನ ಕೇಸ್ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.13ರಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನಿರ್ಧರಿಸಿದೆ.
ಸುದೀರ್ಘ ಹೋರಾಟದ ಪರಿಣಾಮ ಕೇಂದ್ರ ಸರ್ಕಾರ ರೈತ ವಿರೋಧಿ ಮೂರು ಕಾಯ್ದೆಗಳನ್ನು ಹಿಂಪಡೆದಿರುವುದು ಸ್ವಾಗತಾರ್ಹ. ಆದರೂ ಕೇಂದ್ರ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿರುವ ಕೆಲ ಭರವಸೆಗಳನ್ನು ಈಡೇರಿಸಬೇಕಿದೆ. ಈ ನಿಟ್ಟಿನಲ್ಲಿ ಚಳವಳಿಗೆ ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಲೋಕಸಭೆಯಲ್ಲಿ ಮಂಡಿಸಿರುವ ವಿದ್ಯುತ್ ಖಾಸಗೀಕರಣ ಮಸೂದೆ ಹಿಂಪಡೆಯಬೇಕು. ಚಳವಳಿಯಲ್ಲಿ ಮೃತಪಟ್ಟ 700ಕ್ಕೂ ಅಧಿಕ ರೈತರ ಕುಟುಂಬಗಳಿಗೆ ಪರಿಹಾರ ಕೊಡಬೇಕು. ಲಂಖಿಪುರ ಖೇರಿ ಪ್ರಕರಣದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಮತ್ತು ಅವರ ಪುತ್ರ ಆಶಿಷ್ ಮಿಶ್ರಾ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಅತಿವೃಷ್ಟಿಯಿಂದ ಜನ-ಜಾನುವಾರುಗಳ ಪ್ರಾಣಹಾನಿ, ಮನೆ ಹಾನಿ, ಎಲ್ಲ ಬೆಳೆಗಳಿಗೆ ನ್ಯಾಯಯುತ ಪರಿಹಾರ ಕೊಡಬೇಕು. ಮೆಕ್ಕೆಜೋಳಕ್ಕೆ ಕ್ವಿಂಟಾಲ್ 3,000 ರೂ. ಬೆಂಬಲ ಬೆಲೆ ನಿಗದಿ ಮಾಡಿ ಖರೀದಿಸಬೇಕು. ಹನಿ ನೀರಾವರಿ ಮೊದಲಿನಂತೆ ಎಲ್ಲ ವರ್ಗದ ರೈತರಿಗೆ ಶೇ.90 ಸಹಾಯಧನದಲ್ಲಿ ಹೊಸ ದರ ಪಟ್ಟಿ ಪ್ರಕಾರ ಕೊಡಬೇಕು ಎಂದು ಆಗ್ರಹಿಸಿದರು.
ಕಬ್ಬಿಗೆ ನ್ಯಾಯಯುತ ಎಸ್‌ಎಪಿ ನಿಗದಿ ಮಾಡಬೇಕು. ಕಬ್ಬಿನ ಬಾಕಿ ಹಣ ಕೊಡಿಸಬೇಕು. ಅತಿವೃಷ್ಟಿಯಿಂದ ಬೆಳೆಹಾನಿಯಾಗಿದ್ದು ರೈತರ ಎಲ್ಲ ಸಾಲ ಮನ್ನಾ ಮಾಡಬೇಕು. ರೈತರಿಗೆ ಆಶಾಕಿರಣವಾದ ಯಶಸ್ವಿನಿ ಯೋಜನೆ ಜಾರಿಗೊಳಿಸಬೇಕೆಂದು ಎಂದು ಆಗ್ರಹಪಡಿಸಿದರು.