ಭಾರತೀಯ ವಿದ್ಯಾರ್ಥಿಗಳಿಗೆ ಶಾಕ್​: ಈ ಹೊಸ ನಿರ್ಧಾರ ಪಾಲಿಸದಿದ್ರೆ ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಟ್ರಂಪ್! Indian students

Indian students
Published on

Indian students : ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಸರ್ಕಾರದ ಹೊಸ ಕ್ರಮವು ಹಾರ್ವರ್ಡ್ ವಿಶ್ವವಿದ್ಯಾಲಯದ 6,800ಕ್ಕೂ ಹೆಚ್ಚು ವಿದೇಶಿ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿದೆ. ನಿನ್ನೆ (ಮೇ 22) ಟ್ರಂಪ್ ಆಡಳಿತವು ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ವಿದೇಶಿ ವಿದ್ಯಾರ್ಥಿಗಳನ್ನು ನಿಷೇಧಿಸುವುದಾಗಿ ಘೋಷಿಸಿದೆ. ಭಾರತದ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದು, ಟ್ರಂಪ್​ ಆಡಳಿತದ ಹೊಸ ಕ್ರಮ ವಿವಿಧ ದೇಶಗಳ ವಿದ್ಯಾರ್ಥಿಗಳನ್ನು ಬಿಕ್ಕಟ್ಟಿಗೆ ಸಿಲುಕಿಸಿದೆ.

ವಿಶ್ವವಿದ್ಯಾನಿಲಯದ ದಾಖಲೆಗಳ ಪ್ರಕಾರ, ಭಾರತದಿಂದ ಪ್ರತಿ ವರ್ಷ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾರ್ವರ್ಡ್‌ನಲ್ಲಿ ವಿವಿಧ ಕೋರ್ಸ್‌ಗಳಿಗೆ ದಾಖಲಾಗುತ್ತಾರೆ. ಪ್ರಸ್ತುತ, 799 ಭಾರತೀಯ ವಿದ್ಯಾರ್ಥಿಗಳು ಇಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರು ಪದವಿಪೂರ್ವ ಕೋರ್ಸ್‌ಗಳಿಗೆ ದಾಖಲಾಗಿದ್ದಾರೆ. ಟ್ರಂಪ್​ ಆಡಳಿತದ ಹೊಸ ನಿಯಮ ಜಾರಿಗೆ ಬಂದರೆ, ಅಮೆರಿಕದಲ್ಲಿ ಮುಂದುವರಿಯಲು ಬಯಸುವ ವಿದೇಶಿ ವಿದ್ಯಾರ್ಥಿಗಳು ಬೇರೆ ಸಂಸ್ಥೆಗೆ ವರ್ಗಾವಣೆಯಾಗಬೇಕಾಗುತ್ತದೆ ಅಥವಾ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ವಿಶ್ವವಿದ್ಯಾನಿಲಯದ ವಿರುದ್ಧ ಗೃಹ ಭದ್ರತಾ ಇಲಾಖೆಯು ನಡೆಸುತ್ತಿರುವ ತನಿಖೆಯ ಭಾಗವಾಗಿ ಈ ಹೊಸ ನಿರ್ಧಾರವನ್ನು ಆಡಳಿತ ಮಂಡಳಿ ಪ್ರಕಟಿಸಿದೆ. ಈ ಸಂಬಂಧ ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ಗೃಹ ಭದ್ರತಾ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಪತ್ರವೊಂದನ್ನು ಕಳುಹಿಸಿದ್ದಾರೆ. ಹಿಂಸಾಚಾರ, ಯೆಹೂದಿ ವಿರೋಧಿ ಚಟುವಟಿಕೆ ಮತ್ತು ಕ್ಯಾಂಪಸ್‌ಗಳಲ್ಲಿ ಚೀನೀ ಕಮ್ಯುನಿಸ್ಟ್ ಪಕ್ಷದ ಸಹಯೋಗಕ್ಕೆ ಹಾರ್ವರ್ಡ್ ವಿಶ್ವವಿದ್ಯಾಲಯ ಕಾರಣವಾಗಿದೆ. ಇದು ರಾಷ್ಟ್ರೀಯ ಭದ್ರತೆಗೆ ಅಪಾಯವಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ಪ್ರವೇಶವು ಒಂದು ಹಕ್ಕಲ್ಲ, ಅದು ಒಂದು ಸವಲತ್ತು ಮಾತ್ರ ಎಂದು ಪತ್ರದಲ್ಲಿ ಬರೆದಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳು ತಮ್ಮ ವಿನಿಮಯ ಸಂದರ್ಶಕ ಕಾರ್ಯಕ್ರಮದ ಪ್ರಮಾಣಪತ್ರ (SEVP) ಗಳನ್ನು ಮರುಪಡೆಯಲು ಬಯಸಿದರೆ, 72 ಗಂಟೆಗಳ ಒಳಗೆ ಸೂಕ್ತ ಮಾಹಿತಿಯನ್ನು ಒದಗಿಸಬೇಕು ಎಂದು ಹೇಳಿದ್ದಾರೆ.

ಟ್ರಂಪ್ ಆಡಳಿತದ ಈ ಹೊಸ ಕ್ರಮವು ವಿಶ್ವವಿದ್ಯಾನಿಲಯದಲ್ಲಿರುವ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳನ್ನು ಬೇರೆ ಸ್ಥಳಗಳಿಗೆ ವರ್ಗಾಯಿಸಬಹುದು ಅಥವಾ ಅವರ ಕಾನೂನು ಸ್ಥಾನಮಾನವನ್ನು ಕಳೆದುಕೊಳ್ಳಬಹುದು ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆ ತಿಳಿಸಿದೆ. ಹಾರ್ವರ್ಡ್ ವಿಶ್ವವಿದ್ಯಾಲಯವು ಸಹ ಈ ಕ್ರಮಕ್ಕೆ ಪ್ರತಿಕ್ರಿಯಿಸಿದ್ದು, ಟ್ರಂಪ್ ಆಡಳಿತದ ಈ ಕ್ರಮವು ವಿಶ್ವವಿದ್ಯಾನಿಲಯದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತದೆ. ಈ ಕ್ರಮವು ಕಾನೂನುಬಾಹಿರವಾಗಿದೆ ಎಂದಿದೆ. ಅಲ್ಲದೆ, ವಿಶ್ವವಿದ್ಯಾನಿಲಯವು 140ಕ್ಕೂ ಹೆಚ್ಚು ದೇಶಗಳ ವಿದ್ಯಾರ್ಥಿಗಳು ಮತ್ತು ಪಿಎಚ್​ಡಿ ಸ್ಕಾಲರ್ಸ್​ ಸ್ವಾಗತಿಸಲು ಮತ್ತು ರಾಷ್ಟ್ರವನ್ನು ಶ್ರೀಮಂತಗೊಳಿಸಲು ಬದ್ಧವಾಗಿದೆ ಎಂದಿದೆ.

ಭಾರತ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಅಧ್ಯಯನ ಮಾಡುವ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಹಾರ್ವರ್ಡ್ ಕೂಡ ಒಂದು. ಕಳೆದ ವರ್ಷವಷ್ಟೇ 6,700 ವಿದೇಶಿ ವಿದ್ಯಾರ್ಥಿಗಳು ಹಾರ್ವರ್ಡ್‌ಗೆ ಪ್ರವೇಶ ಪಡೆದಿದ್ದರು. ಇದಕ್ಕೂ ಮೊದಲು, ಡೊನಾಲ್ಡ್ ಟ್ರಂಪ್, ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ಆಡಳಿತದ ಆರ್ಥಿಕ ಸಹಾಯವನ್ನು ನಿಲ್ಲಿಸಿದ್ದರು. ಕೋರ್ಸ್ ಪ್ರವೇಶ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವ ಟ್ರಂಪ್ ಅವರ ಕ್ರಮವನ್ನು ವಿಶ್ವವಿದ್ಯಾಲಯ ತಡೆದ ನಂತರ ಈ ಪ್ರತೀಕಾರದ ಕ್ರಮ ಕೈಗೊಳ್ಳಲಾಯಿತು. ತಮ್ಮ ಬೇಡಿಕೆಗಳು ಈಡೇರುವವರೆಗೆ 2 ಬಿಲಿಯನ್ ಡಾಲರ್ ನೆರವು ನೀಡುವುದಿಲ್ಲ ಎಂದು ಟ್ರಂಪ್ ಹೇಳಿದ್ದರು. ಇದೀಗ ಮತ್ತೊಂದು ಕ್ರಮವನ್ನು ತೆಗೆದುಕೊಂಡಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net