ಮೆಟ್ರೋ ನಿಲ್ದಾಣಕ್ಕೆ ಮುನಿರತ್ನ ಹಣ ಕೊಟ್ರೆ, ಅವರ ಹೆಸರನ್ನೇ ಇಡಲು ರೆಡಿ: ಡಿಸಿಎಂ ಲೇವಡಿ

ವಿಜಯವಾಣಿ (70)
Published on

ಬೆಂಗಳೂರು: “ಮುನಿರತ್ನ ಅವರು ಬೆಟ್ಟದಲಸೂರು ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಹಣ ನೀಡಿದರೆ, ಆ ನಿಲ್ದಾಣಕ್ಕೆ ಮುನಿರತ್ನ ಅಂಡ್ ಕಂಪನಿ ಎಂದೇ ಹೆಸರಿಡಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾತಿನ ಚಾಟಿ ಬೀಸಿದ್ದಾರೆ.

ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಬೆಟ್ಟದಲಸೂರು ಮೆಟ್ರೋ ನಿಲ್ದಾಣದ ನಿರ್ಮಾಣಕ್ಕೆ ಎಂಬೆಸಿ ಸಂಸ್ಥೆ ಹಣ ನೀಡಿಲ್ಲ ಎಂದು ಈ ನಿಲ್ದಾಣ ನಿರ್ಮಾಣ ಮಾಡುವುದನ್ನು ಕೈಬಿಟ್ಟಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, “ಬೆಂಗಳೂರಿನಲ್ಲಿ ಒಂದು ಪರಿಕಲ್ಪನೆ ಇದೆ. ಕೆಲವು ಸಂಸ್ಥೆಗಳ ಸಿಎಸ್ಆರ್ ನಿಧಿ ಬಳಸಿಕೊಂಡು ಮೆಟ್ರೋ ನಿಲ್ದಾಣ ನಿರ್ಮಿಸಿದರೆ, ಆ ನಿಲ್ದಾಣಕ್ಕೆ ಸಂಸ್ಥೆ ಹೆಸರಿಡಲು ಅವಕಾಶ ಮಾಡಿಕೊಡುತ್ತೇವೆ. ಈ ಮಾದರಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಶಂಸಿಸಿದರು" ಎಂದರು.

"ಈ ವೇಳೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕೂಡ ಅಲ್ಲೇ ಇದ್ದರು. ಇನ್ಫೋಸಿಸ್ ಅವರು 200 ಕೋಟಿ ರೂ. ಕೊಟ್ಟಿದ್ದು, ಮೆಟ್ರೋ ನಿಲ್ದಾಣಕ್ಕೆ ಆ ಸಂಸ್ಥೆ ಹೆಸರು ಇಡಲಾಗಿದೆ. ಡೆಲ್ಟಾ ಕೂಡ ನೀಡಿದ್ದಾರೆ. ಎಲ್ಲಾ ಸರ್ಕಾರಗಳು ಇದನ್ನು ಮಾಡಿಕೊಂಡು ಬಂದಿವೆ. ಪಾಪ, ಮುನಿರತ್ನ ಅವರಿಗೆ ಸೇರಿದ 70ರಿಂದ 80 ಎಕರೆ ಜಮೀನು ಅಲ್ಲಿದೆ. ಅವರ ಜಮೀನಿನ ಪಕ್ಕ ಅವರಿಗೆ ಮೆಟ್ರೋ ನಿಲ್ದಾಣ ಬೇಕಾಗಿದೆ. ಹೀಗಾಗಿ ಈ ಪ್ರಶ್ನೆ ಎತ್ತಿದ್ದಾರೆ” ಎಂದು ಕುಟುಕಿದರು.

ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಮುನಿರತ್ನ, “ಡಿಸಿಎಂ ಶಿವಕುಮಾರ್ ಅವರು ಬಿಲ್ಡರ್​ಗೆ ಕರೆ ಮಾಡಿ 24 ತಾಸಿನಲ್ಲಿ ಹಣ ಕಟ್ಟುತ್ತೀಯಾ ಇಲ್ಲವಾ ಎಂದು ಎಂಬೆಸಿ ಬಿಲ್ಡರ್ ಸಂಸ್ಥೆಯವರಿಗೆ ಕೇಳಿದರೆ ಸಾಕು. ಅವರು ಹಣ ಕಟ್ಟುತ್ತಾರೆ. ಬೆಂಗಳೂರಿನಲ್ಲಿ ಬಿಲ್ಡರ್ ಗಳು ಕೇವಲ ಶಿವಕುಮಾರ್ ಅವರ ಮಾತನ್ನಷ್ಟೇ ಕೇಳುತ್ತಾರೆ” ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, “ಮನುಷ್ಯನಿಗೆ ಸ್ವಾರ್ಥ ಇರುವುದು ಸಹಜ. ಇದು ತಪ್ಪಲ್ಲ. ನನಗೂ ಇದೆ, ಅವರಿಗೂ ಇದೆ. ಆ ಭಾಗದಲ್ಲಿ ಎಂಬೆಸಿ ಅವರದ್ದು ಸುಮಾರು 250 ಎಕರೆ ಜಮೀನಿದೆ. ಅವರು ಮೆಟ್ರೋ ನಿಲ್ದಾಣಕ್ಕೆ ತಮ್ಮ ಹೆಸರು ಬರಬೇಕು" ಎಂದು ಒಪ್ಪಂದ ಮಾಡಿಕೊಂಡಿದ್ದಾರೆ.

"140 ಕೋಟಿ ರೂ. ಮೊತ್ತದಲ್ಲಿ ನಿರ್ಮಿಸಲಾಗುವ ಮೆಟ್ರೋ ನಿಲ್ದಾಣಕ್ಕೆ 120 ಕೋಟಿ ರೂ. ನೀಡುವುದಾಗಿ ಹೇಳಿದ್ದರು. ಅದರಲ್ಲಿ ಕೇವಲ ರೂ.1 ಕೋಟಿ ಮಾತ್ರ ನೀಡಿದ್ದಾರೆ. ಆ ಭಾಗದಲ್ಲಿ ಮುನಿರತ್ನ ಅವರದ್ದು 70-80 ಎಕರೆ ಜಮೀನಿದೆ, ಹೀಗಾಗಿ ಮುನಿರತ್ನ ಹಣ ಕೊಟ್ಟು ಮೆಟ್ರೋ ನಿಲ್ದಾಣ ನಿರ್ಮಿಸಿದರೆ ಆ ನಿಲ್ದಾಣಕ್ಕೆ ಮುನಿರತ್ನ ಅವರ ಹೆಸರೇ ಇಡುತ್ತೇನೆ” ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net