

ಪಿರಿಯಾಪಟ್ಟಣ: ಬಿಜೆಪಿ ಪಕ್ಷವು ಬೂತ್ ಮಟ್ಟದಲ್ಲಿ ಪ್ರಬಲವಾಗಿದ್ದಲ್ಲಿ ಮಾತ್ರ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಸಾಧ್ಯ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಮರಳವಾಡಿ ತಿಳಿಸಿದರು.
ಪಟ್ಟಣದ ಶ್ರೀ ಕನ್ನಂಬಾಡಿಯಮ್ಮ ಸಮುದಾಯ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಿಜೆಪಿ ತಾಲೂಕು ಮಟ್ಟದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಪಕ್ಷದ ಪಂಚರತ್ನ ಯೋಜನೆಯಡಿ ಎಲ್ಲ ಸಮುದಾಯಗಳಿಗೆ ಸಮಾನ ಆದ್ಯತೆ ನೀಡುವ ಮೂಲಕ ಪಕ್ಷವನ್ನು ಸಂಘಟಿಸುವಂತೆ ಕರೆ ನೀಡಿದರು.
ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಮಟ್ಟದಲ್ಲಿ ನಿಯಮಿತವಾಗಿ ಸಭೆಗಳನ್ನು ಆಯೋಜಿಸುವ ಮೂಲಕ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆಯುವಂತೆ ಸೂಚನೆ ನೀಡಿದರು. ಪಕ್ಷದ ಕಾರ್ಯಕರ್ತರು ಸೇವೆ ಆಧಾರಿತ ಚಟುವಟಿಕೆಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಪ್ರತಿ ಮನೆಗೆ ಒಂದೊಂದು ಸಸಿಯನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಗೆ ಹೆಚ್ಚಿನ ಮಹತ್ವವನ್ನು ನೀಡುವಂತೆ ತಿಳಿಸಿದರು. ಆ.15 ರಿಂದ 30ರವರೆಗೆ ಬೂತ್ ಚಲೋ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ತಿಳಿಸಿದರು.
ಬಿಜೆಪಿ ಜಿಲ್ಲಾ ಖಜಾಂಚಿ ಹಾಗೂ ತಾಲೂಕು ಉಸ್ತುವಾರಿ ಚಂದ್ರಶೇಖರ್ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಭ್ರಷ್ಟ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ಕುಂಠಿತಗೊಂಡಿದ್ದು, ಖಜಾನೆಯ ಹಣವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ದಿವಾಳಿಯತ್ತ ಸಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರದ ಭ್ರಷ್ಟ ಆಡಳಿತವನ್ನು ವಿರೋಧಿಸಿ ಬಿಜೆಪಿ ಪಕ್ಷವು ಆ.3 ರಿಂದ ಹಮ್ಮಿಕೊಂಡಿರುವ ಮೈಸೂರು ಪಾದಯಾತ್ರೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಈ ಹಿಂದೆ ತಮ್ಮ ಪಕ್ಷದ ಬೆಂಬಲ ವ್ಯಕ್ತಪಡಿಸಿರಲಿಲ್ಲ. ಆದರೆ, ಬಿಜೆಪಿ ಕೇಂದ್ರ ನಾಯಕರ ಮಧ್ಯಸ್ಥಿಕೆಯಿಂದ ಈ ಪಾದಯಾತ್ರೆಗೆ ಬರಲು ಒಪ್ಪಿದ್ದು, ಪಾದಯಾತ್ರೆಯ ಚಾಲನೆಯಂದು ನಮ್ಮೊಂದಿಗೆ ಇರಲಿದ್ದಾರೆ ಎಂದರು.
ಪಾದಯಾತ್ರೆಗೆ ಪ್ರತಿ ತಾಲೂಕಿನಿಂದ ಕನಿಷ್ಠ 100 ರಿಂದ 150 ಕಾರ್ಯಕರ್ತರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ವಿ.ರಾಜೇಂದ್ರ ಮಾತನಾಡಿ, ತಾಲೂಕಿನಲ್ಲಿ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಸಕ್ರಿಯ ಕಾರ್ಯಕರ್ತರಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಸೂಚನೆಯಂತೆ ವಿವಿಧ ಹಂತಗಳಲ್ಲಿ ಸಭೆಗಳನ್ನು ಆಯೋಜಿಸುವ ಮೂಲಕ ಪ್ರತಿ ಕಾರ್ಯಕರ್ತರನ್ನು ತಲುಪುವ ಪ್ರಯತ್ನ ಮಾಡಲಾಗುವುದು ಎಂದರು.
ಜಿಲ್ಲಾ ಉಪಾಧ್ಯಕ್ಷ ರಮೇಶ್ ಕುಮಾರ್, ಕೆ.ಎನ್.ಸೋಮಶೇಖರ್, ಮಾಜಿ ಶಾಸಕ ಎಚ್.ಸಿ.ಬಸವರಾಜ್, ಮುಖಂಡ ಆರ್.ಟಿ.ಸತೀಶ್, ಪಿ.ಜೆ.ರವಿ, ಎಂ.ಎಂ.ರಾಜೇಗೌಡ, ಜಿ.ಸಿ.ವಿಕ್ರಮ್ ರಾಜ್, ನಳಿನಿ, ಲೋಕಪಾಲಯ್ಯ, ಲೋಕೇಶ್, ಶಿವಸ್ವಾಮಿ, ರವಿ, ಚನ್ನಬಸವರಾಜು ಇತರರು ಇದ್ದರು.