

ಬೆಂಗಳೂರು: ಮತ್ತೆ ಲಾಕ್ಡೌನ್ ಆಗಬಾರದು ಎಂದರೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ. ಕರೊನಾ ನಿಯಂತ್ರಣಕ್ಕೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಕಡ್ಡಾಯ. ಈ ನಿಯಮಗಳನ್ನು ಜನರು ಹೇಗೆ ಪಾಲಿಸುತ್ತಾರೆ ಎಂದು ಕಾದು ನೋಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಜನತೆಗೆ ಖಡಕ್ ಸೂಚನೆ ನೀಡಿದ್ದಾರೆ.
ಹೆಚ್ಚುತ್ತಿರುವ ಕರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ನಡೆಸಿದ ಸಭೆ ಬಳಿಕ ಮಾತನಾಡಿದ ಅವರು, ಪ್ರಧಾನಿ ಮೋದಿ ಮಾ.17ರಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ನೀಡಲಿರುವ ಸಲಹೆ, ವಾರದ ನಂತರ ಪರಿಸ್ಥಿತಿ ಅವಲೋಕಿಸಿ ಅನಿವಾರ್ಯವೆನಿಸಿದರೆ ಬಿಗಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕೆಲವು ಜಿಲ್ಲೆಗಳಲ್ಲಿ ಕರೊನಾ ಸೋಂಕು ಪ್ರಮಾಣ ಜಾಸ್ತಿ, ಮರಣ ಪ್ರಮಾಣ ಕಡಿಮೆ ಇದೆ. ಎರಡನೇ ಅಲೆ ಮುನ್ಸೂಚನೆ ಇದು ಎಂದು ತಜ್ಞರ ತಂಡ ತಿಳಿಸಿದೆ. ಪರಿಸ್ಥಿತಿ ಎದುರಿಸಲು ಕೆಲವು ಸಲಹೆಗಳನ್ನು ನೀಡಿದ್ದು ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತದೆ, ಮತ್ತೆ ಲಾಕ್ಡೌನ್ ಆಗಬಾರದು ಎಂದರೆ ಜನತೆ ಕಟ್ಟುನಿಟ್ಟಾಗಿ ಕರೊನಾ ನಿಯಮ ಪಾಲಿಸಬೇಕು ಎಂದು ಸಿಎಂ ಮನವಿ ಮಾಡಿದರು.
ಕಳೆದ 14 ದಿನಗಳಲ್ಲಿ ಪಾಸಿಟಿವ್ ದರ ಹೆಚ್ಚಾಗಿದೆ, ಮರಣ ದರ ಕಡಿಮೆ ಇದೆ. ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ತುಮಕೂರು, ಉಡುಪಿ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಪಾಸಿಟಿವ್ ದರ ಹೆಚ್ಚಾಗಿದೆ. ಇದು ಕರೊನಾ ಎರಡನೇ ಅಲೆಯ ಮುನ್ಸೂಚನೆ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೆಚ್ಚು ಪಾಸಿಟಿವ್ ಇರುವ ಜಿಲ್ಲೆಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸಲು ಅಧಿಕಾರಿಗಳು ಸಲಹೆ ನೀಡಿದ್ದಾರೆ ಎಂದರು. ಮತದಾರರ ಪಟ್ಟಿ ಆಧರಿಸಿ ಹಿರಿಯ ನಾಗರಿಕರನ್ನು ಗುರುತಿಸಿ ಲಸಿಕೆ ಹಾಕುವುದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಿರಿಯ ನಾಗರಿಕರಿಗೆ ಲಸಿಕೆ ಸೇರಿ ಕರೊನಾ ಹೆಚ್ಚು ಇರುವ ಜಿಲ್ಲೆಗಳಲ್ಲಿ ಕೈಗೊಳ್ಳುವ ಸಲಹೆ ನೀಡಲಾಗಿದೆ ಎಂದರು.