ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

08.pyp.01
Published on

ಪಿರಿಯಾಪಟ್ಟಣ: ತಾಲೂಕಿನಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಶಾಸಕ ಕೆ.ಮಹದೇವ್ ಎಚ್ಚರಿಸಿದರು.

ತಾಲೂಕಿನ ಹಾರನಹಳ್ಳಿ ಮತ್ತು ಅಂಬಲಾರೆ ಗ್ರಾಮಗಳಲ್ಲಿ 1.40 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿ ಒತ್ತುವರಿ ತೆರವುಗೊಳಿಸುವ ಯತ್ನಿಸುತ್ತಿದ್ದಾರೆ ಎಂದು ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದರು.

ಗ್ರಾಮಠಾಣಾ, ಸರ್ಕಾರಿ ಜಾಗ ಮತ್ತು ಕೆರೆಗಳನ್ನು ಒತ್ತುವರಿ ಮಾಡಿಕೊಂಡಿರುವವರು ಯಾವುದೇ ಪಕ್ಷದವರಾಗಿರಲಿ ಕೂಡಲೇ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಕೆರೆ ಮತ್ತು ಗ್ರಾಮಠಾಣಾ ಪ್ರದೇಶದ ಒತ್ತುವರಿಯನ್ನು ತೆರವುಗೊಳಿಸಿ ಆ ಜಾಗವನ್ನು ಗ್ರಾಮದ ನಿವೇಶನ ರಹಿತರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಲಾಕ್‌ಡೌನ್‌ನಿಂದ ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿದ್ದು, ಶಾಸಕರ ಅನುದಾನವನ್ನು ಸರ್ಕಾರ ಸಂತ್ರಸ್ತರ ನೆರವಿಗೆ ಬಳಸಿಕೊಳ್ಳುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಿದ್ದ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ನೀಡದಿರುವುದು ಅಭಿವೃದ್ಧಿ ಕುಂಠಿತವಾಗಿದೆ ಎಂದು ಹೇಳಿದರು.

ಜಿಪಂ ಸದಸ್ಯೆ ರುದ್ರಮ್ಮ, ತಹಸೀಲ್ದಾರ್ ಶ್ವೆತಾ ಎನ್.ರವೀಂದ್ರ, ತಾಪಂ ಸದಸ್ಯೆ ಸುಮಿತ್ರಾ, ಮಾಜಿ ಸದಸ್ಯರಾದ ರಘುನಾಥ್, ಶಂಕರೇಗೌಡ, ಮುಖಂಡರಾದ ವಿದ್ಯಾಶಂಕರ, ಹೇಮಂತ್ ಕುಮಾರ್, ಕರಿಗೌಡ, ಮೈಲಾರಪ್ಪ, ಜಿಪಂ ಎಇಇ ಪ್ರಭು, ನಾಗರಾಜು ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net