ಲೋಕಸಭಾ ಚುನಾವಣೆ 2024; ಇನ್ನು ಮೂರು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಿಎಸ್​ವೈ

Untitled design - 2024-02-25T152407.865
Published on

ಚಿಕ್ಕಮಗಳೂರು: ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಇನ್ನು ಮೂರು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಿದರು.

ರಾಜ್ಯದ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿ ಗೊಂದಲವಿದೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಎಸ್​ವೈ, ಇನ್ನೂ ಎರಡು ಮೂರು ದಿನಗಳಲ್ಲಿ ಎಲ್ಲಾ ಗೊಂದಲ ಬಗೆಹರಿಯಲಿದೆ. ಮೂರು ದಿನದಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗುವ ಮೂಲಕ ಎಲ್ಲಾ ಗೊಂದಲಕ್ಕೂ ತೆರೆ ಬೀಳಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಕಾರಣಕ್ಕೆ ಇಡೀ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾಗಿ ವಾತಾವರಣವಿದೆ ಎಂದರು.

ಹೀಗಾಗಿ ಕರ್ನಾಟಕದ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಪ್ರಯತ್ನ ಮಾಡುತ್ತಿದೆ ಜತೆಗೆ ಇದಕ್ಕೆ ಪೂರಕ ವಾತಾವರಣವೂ ಇದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ಹಾಗೂ ಪಿತೂರಿ ನಡೆಯುತ್ತಿದೆ. ಇದನ್ನು ಯಾರು ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಇಂತಹ ಷಡ್ಯಂತ್ರಗಳಿಂದ ಶೋಭಾ ಕರಂದ್ಲಾಜೆ ದೃತಿಗೆಡುವುದಿಲ್ಲ ಎಂದರು.

ಕಳೆದ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ 3.50 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿ ಚುನಾವಣೆಯಲ್ಲಿ ಇದಕ್ಕಿಂತಲೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದರು. ಹೀಗೆಂದು ಹೇಳುವ ಮೂಲಕ ಶೋಭಾ ಕರಂದ್ಲಾಜೆ ಅವರೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಎನ್ನುವುದನ್ನು ಪರೋಕ್ಷವಾಗಿ ಘೋಷಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net