

ಬಣಕಲ್: ಸರ್ಕಾರಿ ಶಾಲೆ ಹಾಗೂ ಕಚೇರಿಗಳಲ್ಲಿ ಕಡ್ಡಾಯವಾಗಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಿಸಬೇಕು ಎಂದು ಬಣಕಲ್ ಹಿರೇಬೈಲ್‌ನ ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದಿಂದ ಶಾಸಕಿ ನಯನಾ ಮೋಟಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ಅಧ್ಯಕ್ಷ ರಾಮಚಂದ್ರ ಮಾತನಾಡಿ, 2016ರಲ್ಲಿ ರಾಜ್ಯ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಿಸುವಂತೆ ಆದೇಶ ನೀಡಿದ್ದು ಪ್ರತಿವರ್ಷವೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಿಸಲಾಗುತ್ತಿದೆ. ಆದರೆ ಗ್ರಾಪಂ ಸೇರಿದಂತೆ ಕೆಲವು ಸರ್ಕಾರಿ ಕಚೇರಿಗಳಲ್ಲಿ ನಾರಾಯಣ ಗುರುಗಳ ಜಯಂತಿ ಆಚರಿಸುತ್ತಿಲ್ಲ. ಎಲ್ಲ ಸರ್ಕಾರಿ ಕಚೇರಿ, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕಡ್ಡಾಯವಾಗಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಿಸುವ ಅಗತ್ಯವಿದೆ. ಜತೆಗೆ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರವನ್ನು ಸರ್ಕಾರಿ ಕಚೇರಿ ಮತ್ತು ಶಾಲೆಗಳಲ್ಲಿ ಹಾಕಬೇಕು ಎಂದು ಒತ್ತಾಯಿಸಿದರು.
ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ತಾಲೂಕು ಅಧ್ಯಕ್ಷ ಮಹೇಶ್, ಬಣಕಲ್, ಹಿರೇಬೈಲ್, ಮೂಡಿಗೆರೆ ಸಂಘದ ಪದಾಧಿಕಾರಿಗಳು, ಮುಖಂಡ ಅಜೀಜ್ ಕೊಟ್ಟಿಗೆಹಾರ ಇತರರಿದ್ದರು.