ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ನಗರದಾದ್ಯಂತ ತೀವ್ರ ಕಟ್ಟೆಚ್ಚರ

crime
Published on

ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಬಾಂಬ್ ಸ್ಫೋಟಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ನಗರದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.

ಜನನಿಬಿಡ ಸ್ಥಳಗಳಲ್ಲಿ ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯುತ್ತಿರುವುದರಿಂದ ಮತ್ತಷ್ಟು ಭದ್ರತೆ ಹೆಚ್ಚಿಸಲಾಗಿದೆ. ಕ್ರೀಡಾಂಗಣದ ಸುತ್ತಮುತ್ತ ಹಾಗೂ ಅಕ್ಕಪಕ್ಕದ ರಸ್ತೆಗಳು, ಆಟಗಾರರು ವಾಸ್ತವ್ಯವಿರುವ ಹೋಟೆಲ್‌ಗಳ ಬಳಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ತೀವ್ರ ಕಣ್ಗಾವಲಿರಿಸಿದ್ದಾರೆ. ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಹಾಗೂ ಶ್ವಾನದಳದೊಂದಿಗೆ ಮೈದಾನದ ಸುತ್ತಮುತ್ತ ಪರಿಶೀಲನೆ ನಡೆಸಿದ್ದಾರೆ.

ಬಸ್ಸು, ರೈಲು ಮತ್ತು ವಿಮಾನ ನಿಲ್ದಾಣಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಅಷ್ಟೇ ಅಲ್ಲದೆ, ರಾಜ್ಯದ ಎಲ್ಲಾ ವಿಮಾನ, ಬಸ್ಸು ಮತ್ತು ರೈಲು ನಿಲ್ದಾಣಗಳಲ್ಲೂ ನಿಗಾ ಇಡಲು ಸೂಚನೆ ನೀಡಲಾಗಿದೆ. ರೈಲು ನಿಲ್ದಾಣಗಳಲ್ಲಿ ಭದ್ರತೆಗೆ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಪ್ರಯಾಣಿಕರ ಬ್ಯಾಗುಗಳನ್ನು ಹೋಮ್ ಗಾರ್ಡ್ಸ್‌ಗಳು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರತಿಯೊಬ್ಬ ಪ್ರಯಾಣಿಕರ ಮೇಲೆ ನಿಗಾ ಇಟ್ಟಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಭದ್ರತೆ ಹೆಚ್ಚಿಸಲಾಗಿದೆ. ಟರ್ಮಿನಲ್ ಆವರಣಗಳಲ್ಲಿ ಕ್ಯಾಬ್ ಮತ್ತು ಪ್ರಯಾಣಿಕರನ್ನು ಕರೆದೊಯ್ಯುವ ಇತರ ವಾಹನಗಳ ಕಾಯುವಿಕೆ ಅವಧಿಯನ್ನು ಕಡಿಮೆ ಮಾಡಲಾಗಿದೆ. ವಿಮಾನ ನಿಲ್ದಾಣ ಮಾತ್ರವಲ್ಲದೆ, ಪ್ರಮುಖ ಪ್ರದೇಶಗಳಲ್ಲಿಯೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net