ರಾಜ್ಯಾದ್ಯಂತ ಸ್ವಾತಂತ್ರ್ಯೋತ್ಸವ ಸಂಭ್ರಮ

Independence Day 1
Published on

ಬೆಂಗಳೂರು: ಕರೊನಾತಂಕ ಮತ್ತು ಮಳೆ ನಡುವೆಯೂ ರಾಜ್ಯಾದ್ಯಂತ 74ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮಾಡಿದೆ.

ವಿವಿಧ ಇಲಾಖೆಯ ಸ್ತಬ್ಧಚಿತ್ರಗಳು ಕೋವಿಡ್ ತಡೆಯ ಅರಿವು, ಸ್ವಚ್ಛತೆ ಬಗ್ಗೆ ಪ್ರತಿಬಿಂಬಿಸಿದವು. ಡಿಎಆರ್, ಕೆಎಸ್ಆರ್​ಪಿ, ಸಿವಿಲ್ ಪೊಲೀಸ್, ಕಾರಾಗೃಹ, ಹೋಂಗಾರ್ಡ್ ಮತ್ತು ಎನ್​ಸಿಸಿ ತಂಡ ಪಥಸಂಚಲನ ನಡೆಸಿದವು. ಕರೊನಾ ಭೀತಿ ಹಿನ್ನೆಲೆಯಲ್ಲಿ ಬಹುತೇಕ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಆಗಮಿಸದ ಕಾರಣ ಕ್ರೀಡಾಂಗಣ ಭಣಗುಡುತ್ತಿದ್ದವಾದರೂ ಎಲ್ಲೆಡೆ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಅವರು ತಮ್ಮ ಅಧಿಕೃತ ನಿವಾಸ ಕಾವೇರಿ ಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ ಧ್ವಜಾರೋಹಣ ನೆರವೇರಿಸಿದರು. ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಸಚಿವ ಜಗದೀಶ ಶೆಟ್ಟರ್​, ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ರಮೇಶ ಜಾರಕಿಹೊಳಿ, ಹಾಸನದಲ್ಲಿ ಸಚಿವ ಕೆ. ಗೋಪಾಲಯ್ಯ, ಕಲಬುರಗಿಯಲ್ಲಿ ಸಚಿವ ಶ್ರೀಮಂತ ಪಾಟೀಲ, ಚಾಮರಾಜನಗರದಲ್ಲಿ ಸಚಿವ‌ ಎಸ್. ಸುರೇಶ್ ಕುಮಾರ್, ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಡಿಸಿಎಂ ಅಶ್ವಥನಾರಾಯಣ ... ಹೀಗೆ ಎಲ್ಲ ಜಿಲ್ಲಾ ಕೇಂದ್ರದಲ್ಲೂ ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಧ್ವಜಾರೋಹಣ ನೆರವೇರಿಸಿದರು. ಅನಾರೋಗ್ಯ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಗೈರಾಗಿದ್ದರಿಂದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಧ್ವಜಾರೋಹಣ ಮಾಡಿದರು.

ಕರೊನಾ ಹಿನ್ನೆಲೆಯಲ್ಲಿ ಸರಳವಾಗಿ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಶಾಲಾ ಮಕ್ಕಳ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರ್ಬಂಧಿಸಲಾಗಿತ್ತು. ಹಲವೆಡೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳು ಮತ್ತು ಕರೊನಾ ಸೇನಾನಿಗಳಿಗೆ ಸನ್ಮಾನ ಮಾಡಲಾಯಿತು.

ಚಾಮರಾಜನಗರದಲ್ಲಿ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ‌ ಎಸ್. ಸುರೇಶ್ ಕುಮಾರ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ರೈತ ಸಂಘದ ಕಾರ್ಯಕರ್ತರನ್ನು ನಗರದಲ್ಲಿ ಪೊಲೀಸರು ಬಂಧಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net