ಆ.15ರಂದು ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

Independence Day pre-meeting Mandya
Published on

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಆ.15ರಂದು ಸರ್‌ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣ ಹಾಗೂ ವೈಭವಯುತವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನವನ್ನು ಯಾವುದೇ ಲೋಪವಿಲ್ಲದಂತೆ ಆಚರಿಸಲು ಸ್ವಾಗತ, ವೇದಿಕೆ, ಸಾಂಸ್ಕೃತಿಕ, ವಸ್ತು ಪ್ರದರ್ಶನ ಸೇರಿದಂತೆ ವಿವಿಧ ಸಮಿತಿ ರಚಿಸಬೇಕು. ಆ ಸಮಿತಿಗಳು ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳನ್ನು ಧ್ವಜಾರೋಹಣ ನೆರವೇರಿಸಬೇಕು. ಅಂತೆಯೇ ಅಧಿಕಾರಿ, ಸಿಬ್ಬಂದಿ ಜಿಲ್ಲಾಮಟ್ಟದ ಕಾರ್ಯಕ್ರಮಕ್ಕೆ ಹಾಜರಾಗಬೇಕು. ಈ ಸಂಬಂಧ ಹಾಜರಾತಿ ಪಡೆಯಲಾಗುವುದು. ಪ್ರತಿ ಬಾರಿ ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡುತ್ತಿದ್ದು, ಈ ಬಾರಿ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳ ಮೂಲಕ ದೇಶ ಭಕ್ತಿ ನೃತ್ಯ ಪ್ರದರ್ಶನ ನೀಡಬೇಕು ಎಂದರು.

ಸರ್ಕಾರಿ ಕಚೇರಿಗಳು ಆ.14ರಂದು ರಾತ್ರಿಯಿಂದ ದೀಪಾಲಂಕಾರ ಮಾಡಿ ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಬೇಕು. ಈ ಬಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಸುಮಾರು 30 ತಂಡಗಳ ಪಥ ಸಂಚಲನವನ್ನು ಆಯೋಜಿಸುವುದು ಸೂಕ್ತ.ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಸ್ಕೌಟ್ಸ್ ಆ್ಯಂಡ್ ಗೈಡ್ಸ್, ರೋವರ್ಸ್ ಆ್ಯಂಡ್ ರೇಂಜರ್ಸ್, ಎನ್‌ಸಿಸಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಸುವಂತೆ ತಿಳಿಸಿದರು.

ಮಳೆ ಹೆಚ್ಚಾದ ಕಾರಣ ಕ್ರೀಡಾಂಗಣದ ಒಳಾವರಣದಲ್ಲಿ ಅಲ್ಲಲ್ಲಿ ಹೆಚ್ಚು ಹುಲ್ಲು ಹಾಸಿಗೆ ಬೆಳೆದಿದೆ. ಅದನ್ನೆಲ್ಲ ಆದಷ್ಟು ಬೇಗನೆ ಸ್ವಚ್ಛಗೊಳಿಸಬೇಕು. ದಿನಾಚರಣೆಯಂದು ಶಾಲಾ, ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಕೂರಲು ಸರಿಯಾದ ವ್ಯವಸ್ಥಿತವಾದ ಸ್ಥಳಾವಕಾಶ ಬೇಕಾಗಿರುವುದರಿಂದ ಕ್ರೀಡಾಂಗಣವನ್ನು ಸರಿಯಾಗಿ ಸ್ವಚ್ಛಗೊಳಿಸಿ. ಸರ್ಕಾರದ ಆದೇಶದ ಮೇರೆಗೆ ಕಡ್ಡಾಯವಾಗಿ ಸರ್ಕಾರಿ ಶಾಲಾ, ಕಾಲೇಜು, ಕಚೇರಿಗಳಲ್ಲಿ ಧ್ವಜಾರೋಹಣ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯಂದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಲು ವಸ್ತು ಪ್ರದರ್ಶನ ಮಳಿಗೆಯನ್ನು ತೆರೆಯಬೇಕು. ಆರೋಗ್ಯ, ಕೃಷಿ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯಿತಿ ಎನ್‌ಆರ್‌ಎಲ್ಎಂ ವಿಭಾಗ ಸೇರಿದಂತೆ ವಸ್ತು ಪ್ರದರ್ಶನ ಮಳಿಗೆಯನ್ನು ತೆರೆಯಿರಿ. ಕುಡಿಯಲು ನೀರಿನ ವ್ಯವಸ್ಥೆ ಮಾಡಬೇಕು. ಬಂದಂತಹ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಬಾರದ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ಜಿಪಂ ಉಪ ಕಾರ್ಯದರ್ಶಿ ಎಂ.ಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಡಿಡಿಪಿಐ ಸಿ.ಚೆಲುವಯ್ಯ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಕೃಷ್ಣಕುಮಾರ್, ನಗರಸಭೆ ಆಯುಕ್ತ ಆರ್.ಮಂಜುನಾಥ್, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಬಿ.ಎಸ್.ಸೀತಾಲಕ್ಷ್ಮೀ, ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್, ಡಿಡಿಪಿಐ ಎಚ್.ಶಿವರಾಮೇಗೌಡ, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net