

ನವದೆಹಲಿ: ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ ಬೆಂಬಲ ಬೆಲೆ ನೀಡಬೇಕು(Insist on inclusion of tobacco under PM Fasal Bima Yojana) . ಈ ಕುರಿತು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್(piyush goyal) ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಹೇಳಿದ್ದಾರೆ.
ಬೆಲೆ ಕುಸಿತ ಸೇರಿ ಹಲವಾರು ಸಮಸ್ಯೆಗಳಿಗೆ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ಸಚಿವರಿಗೆ ಈ ಮನವಿ ಸಲ್ಲಿಸಿದ್ದೇವೆ. ಇದೇ ವೇಳೆ ನಮ್ಮ ಜತೆಯಲ್ಲಿದ್ದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ(H D Kumaraswamy) ಅವರು ಕೂಡ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು ಎಂದು ನಿಖಿಲ್ ಹೇಳಿದ್ದಾರೆ.
ನೆರೆ ರಾಜ್ಯಗಳಲ್ಲಿ ತಂಬಾಕು ಬೆಳೆಗಾರಿಗೆ ಉತ್ತಮ ದರ ಸಿಗುತ್ತಿದೆ. ಕರ್ನಾಟಕದ ಬೆಳೆಗಾರರಿಗೆ ಸಿಗುತ್ತಿಲ್ಲ. ಆಂಧ್ರ ಪ್ರದೇಶದಲ್ಲಿ ತಂಬಾಕಿನ ಬೆಲೆ ಪ್ರತಿ ಕೆಜಿಗೆ ಸರಾಸರಿ 320 ರೂ. ಇದೆ. ಕರ್ನಾಟಕದಲ್ಲಿ ಪ್ರತಿ ಕೆಜಿಗೆ 265 ರೂ. ಇದೆ. ಕಡಿಮೆ ಬೆಲೆಯಿಂದಾಗಿ ಬಡ ಹಾಗೂ ಮಧ್ಯಮ ಬೆಳೆಗಾರರಿಗೆ ನಷ್ಟವಾಗುತ್ತಿದೆ. ಇದನ್ನು ಸಚಿವ ಗೋಯೆಲ್‌ರಿಗೆ ತಿಳಿಸಲಾಗಿದೆ ಎಂದರು.
ಈ ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ವ್ಯಾಪ್ತಿಗೆ ತಂದರೆ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ವರ್ಗದ ಬೆಳೆಗಾರರಿಗೆ ಸಹಾಯವಾಗಲಿದೆ. ಐಟಿಸಿಯಂತಹ ಬೃಹತ್ ಕಂಪನಿಗಳು ಇಂತಹ ಬೆಳೆಗಾರರಿಂದ ನೇರವಾಗಿ ತಂಬಾಕು ಖರೀದಿಸುವಂತೆ ಸೂಚನೆ ಕೊಡಬೇಕು ಎಂದು ಕೋರಲಾಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿ, ಅಧಿಕಾರಿಗಳಿಗೆ ಕೆಲ ಆದೇಶಗಳನ್ನು ನೀಡಿದ್ದಾರೆ. ಮತ್ತೊಮ್ಮೆ ಅಧಿಕಾರಿಗಳನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಆಮೂಲಾಗ್ರವಾಗಿ ಚರ್ಚೆ ಮಾಡುವಂತೆಯೂ ಸಲಹೆ ನೀಡಿದ್ದಾರೆ ಎಂದು ನಿಖಿಲ್ ಮಾಹಿತಿ ಹಂಚಿಕೊಂಡಿದ್ದಾರೆ.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಲ್ಲೇಶ್ ಬಾಬು, ಮಾಜಿ ಸಚಿವ ಸಾ.ರಾ.ಮಹೇಶ್, ಶಾಸಕ ಜಿ.ಟಿ.ಹರೀಶ್ ಗೌಡ ತಂಬಾಕು ಬೆಳೆಗಾರರು ನಿಯೋಗದಲ್ಲಿ ಇದ್ದರು.