

ಶಿವಮೊಗ್ಗ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿದ್ದು, ಗೃಹಲಕ್ಮಿ ಯೋಜನೆಯಿಂದ ಆರ್ಥಿಕ ಚಟುವಟಿಕೆ ಕೈಗೊಂಡ ಕನಿಷ್ಠ 25 ಮಹಿಳಾ ಫಲಾನುಭವಿಗಳ ಯಶೋಗಾಥೆಯ ವಿಡಿಯೋಗಳನ್ನು ಚಿತ್ರೀಕರಣ ಮಾಡಿ ನೀಡುವಂತೆ ಶಿವಮೊಗ್ಗ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಎಚ್.ಎಂ.ಮಧು ಸಮಿತಿ ಸದಸ್ಯರಿಗೆ ಸೂಚಿಸಿದರು.
ತಾಪಂ ಸಭಾಂಗಣದಲ್ಲಿ ಬುಧವಾರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಗೃಹಲಕ್ಮಿ ಯೋಜನೆಯು ಯಶಸ್ವಿಯಾಗಿ ಅನುಷ್ಟಾನಗೊಂಡಿದ್ದು ಶಿವಮೊಗ್ಗ ತಾಲ್ಲೂಕಿನಲ್ಲಿ ಒಟ್ಟು 1,07,520 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ ಎಂದರು.
ಈ ಪೈಕಿ 2,044 ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಪಾವತಿದಾರರಿದ್ದಾರೆ. 298 ಲಾನುಭವಿಗಳು ಮೃತಪಟ್ಟಿದ್ದಾರೆ. ಗೃಹ ಜ್ಯೋತಿ ಯೋಜನೆಯಡಿ ಒಟ್ಟು 2,20,168 ಗ್ರಾಹಕರಿದ್ದು 2024-25 ನೇ ಸಾಲಿನಲ್ಲಿ 10,78,12,094 ಕೋಟಿ ರೂ. ಸಬ್ಸಿಡಿ ನೀಡಲಾಗಿದೆ ಎಂದು ತಿಳಿಸಿದರು.
ಕೆಲವು ಮಹಿಳೆಯರಿಗೆ ಗೃಹಲಕ್ಮಿ ಹಣ ಜಮೆಯಾಗದಿರುವ ಕುರಿತು ಪರಿಶೀಲನೆ ಮಾಡಲಾಗಿ, ಎನ್‌ಪಿಸಿಐ ದೋಷದಿಂದ ಗೃಹಲಕ್ಮಿ ಹಣ ಜಮೆಯಾಗುತ್ತಿಲ್ಲ. ಕೆಲವು ಬ್ಯಾಂಕ್ ಖಾತೆಗಳಿಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿಲ್ಲ. ಇದರಿಂದ ಹಣ ಜಮೆಯಾಗುತ್ತಿಲ್ಲ ಎಂದು ಹೇಳಿದರು.
ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್ ಮಾತಾನಾಡಿ, ಮೇ ಅಂತ್ಯಕ್ಕೆ ಶಿವಮೊಗ್ಗ ತಾಲೂಕಿನಲ್ಲಿ ಯುವನಿಧಿ ಯೋಜನೆಯಡಿ 58,81,500 ರೂ. ಫಲಾನುಭವಿಗಳ ಖಾತೆಗೆ ಜಮೆಯಾಗಿರುತ್ತದೆ. ಕಳೆದ ವರ್ಷಕ್ಕಿಂತ ಈ ಬಾರಿ ಯುವನಿಧಿ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದ್ದು ಈ ವರ್ಷವೂ ಅರ್ಹ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದರು.
ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ಎನ್.ತಾರಾ ಮುಂತಾದವರಿದ್ದರು.