ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ; 40 ಲಕ್ಷ ಜನ ಭಾಗವಹಿಸುವ ನಿರೀಕ್ಷೆ

DR HC MAHADEVAPPA
Published on

ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ(ಸೆಪ್ಟಂಬರ್ 15) ರಂದು ಆಚರಿಸುವ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಚಿವ ಮಹಾದೇವಪ್ಪ, ಪ್ರಜಾಪ್ರಭುತ್ವ ದಿನಾಚರಣೆಯಂದು ಬೀದರ್ ನಿಂದ ಚಾಮರಾಜನಗರದ ವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಾನವ ಸರಪಳಿಯ ಜವಾಬ್ದಾರಿಯನ್ನು ವಹಿಸಬೇಕು ಎಂದು ಹೇಳಿದರು.

ದೇಶದ ಮುಂದಿನ ಪೀಳಿಗೆಯು ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತ ಜಾಗೃತಿ ಅತ್ಯಂತ ಅಗತ್ಯ. ಈ ಹಿನ್ನಲೆಯಲ್ಲಿ ಸರ್ಕಾರ ಬೃಹತ್ ಮಾನವ ಸರಪಳಿಯನ್ನು ರಚಿಸುವ ಮೂಲಕ ವಿಭಿನ್ನವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಿದೆ ಎಂದರು.

ಸೆಪ್ಟೆಂಬರ್ 15 ರಂದು ಎಲ್ಲ ಜನರೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಿಂಬಿಸುವುದಕ್ಕೆ ಪೂರಕವಾಗಿ ಚಟುವಟಿಕೆಗಳನ್ನು ಮಾಡಬಹುದು ಮತ್ತು ಮಾನವ ಸರಪಳಿಯಲ್ಲಿ ಪಾಲ್ಗೊಳ್ಳಬಹುದು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸುಮಾರು 40 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಸಚಿವ ಮಹಾದೇವಪ್ಪ ಹೇಳಿದರು.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net