

Madhya Pradesh| ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಸೋಮವಾರ (5) ದಂದು ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಕಾರ್ಯಾಚರಣೆಗಳು ನಡೆಯುತ್ತಿವೆ.
ಇನ್ವರ್ಟರ್ ಬ್ಯಾಟರಿಯಲ್ಲಿ ಸ್ಫೋಟ ಸಂಭವಿಸಿದ ಬಳಿಕ ದೇವಾಲಯದ ಆವರಣದಲ್ಲಿರುವ 'ಶಂಖ್ ದ್ವಾರ್' ಬಳಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಈ ಘಟನೆಯಿಂದ ಯಾವುದೇ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ.
ಜಿಲ್ಲಾಧಿಕಾರಿ ರೋಷನ್ ಸಿಂಗ್ ಮತ್ತು ಎಸ್ಪಿ ಪ್ರದೀಪ್ ಶರ್ಮಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಮಹಾಕಾಲ್ ಪೊಲೀಸರು ಮತ್ತು ಅಗ್ನಿಶಾಮಕ ಸುರಕ್ಷತಾ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯ ಮುಂದುವರೆಸಿದ್ದಾರೆ.
ಇನ್ನೂ ಈ ಘಟನೆ ಬಗ್ಗೆ ಉಜ್ಜಯಿನಿ ಜಿಲ್ಲಾಧಿಕಾರಿ ರೋಶನ್ ಸಿಂಗ್ ಪ್ರತಿಕ್ರಿಯಿಸಿದ್ದು, ಹದಿನೈದು ನಿಮಿಷಗಳ ಹಿಂದೆ ಮಾಲಿನ್ಯ ನಿಯಂತ್ರಣ ಮಂಡಳಿಯ ವಾಯು ಗುಣಮಟ್ಟ ನಿರ್ವಹಣಾ ವ್ಯವಸ್ಥೆಯಲ್ಲಿನ ಬ್ಯಾಟರಿಗಳು ಸ್ಫೋಟಗೊಂಡಿದ್ದು, ಬೆಂಕಿ ಅವಘಡಕ್ಕೆ ಕಾರಣವಾಗಿದೆ. ಅದು ದೇವಾಲಯದ ನಿಯಂತ್ರಣ ಕೊಠಡಿಯ ಮೇಲ್ಭಾಗದಲ್ಲಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು ಎಂದು ಹೇಳಿದ್ದಾರೆ.
(ಏಜೆನ್ಸೀಸ್)