

ಶಿವಮೊಗ್ಗ: ಭದ್ರಾ ಜಲಾಶಯದಲ್ಲಿ ಈ ಬಾರಿ ಅತಿ ಕಡಿಮೆ ನೀರಿನ ಸಂಗ್ರಹವಿದೆ. ಹೀಗಾಗಿ 100 ದಿನ ಸತತವಾಗಿ ನಾಲೆಗಳಲ್ಲಿ ನೀರು ಹರಿಸುವ ತೀರ್ಮಾನವನ್ನು ಕೈ ಬಿಡಬೇಕೆಂದು ಒತ್ತಾಯಿಸಿ ಸಾಮಾಜಿಕ ಹೋರಾಟಗಾರರಾದ ಶಶಿಕುಮಾರ್ ಗೌಡ ಹಾಗೂ ವೆಂಕಟೇಶ್ ಮಂಗಳವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಲಾಶಯದಿಂದ ಸತತ 100 ದಿನ ನೀರು ಹರಿಸಿದರೆ ಬೇಸಿಗೆಯಲ್ಲಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಕೊರತೆಯಾಗಲಿದೆ. ಕುಡಿಯುವ ನೀರಿಗೂ ಸಮಸ್ಯೆಯಾಗುತ್ತದೆ. ಮುಂಗಾರು ಕೈ ಕೊಟ್ಟಿದೆ. ಮುಂದಿನ ದಿನಗಳಲ್ಲಿ ಮಳೆಯಾಗಿ ಜಲಾಶಯ ಭರ್ತಿಯಾಗುವ ನಿರೀಕ್ಷೆಯೂ ಇಲ್ಲ. ಹೀಗಾಗಿ ಈಗಲೇ ಜಲಾಶಯದ ನೀರು ಖಾಲಿ ಮಾಡುವುದು ಸರಿಯಲ್ಲ ಎಂದು ಹೇಳಿದರು.
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಕೊರತೆಯಿಂದ ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ರೈತರಿಗೆ ಆರ್ಥಿಕ ನೆರವು ನೀಡಬೇಕು. ಭತ್ತ ಹಾಗೂ ಮೆಕ್ಕೆಜೋಳ ಸಂಪೂರ್ಣವಾಗಿ ನಾಶವಾಗಿದೆ. ಪ್ರತಿ ಎಕರೆ ಭತ್ತಕ್ಕೆ 30 ಸಾವಿರ ರೂ. ಮೆಕ್ಕೆಜೋಳಕ್ಕೆ 25 ಸಾವಿರ ರೂ. ಪರಿಹಾರ ನೀಡಬೇಕು. ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.