

ಲಂಡನ್ (ಇಂಗ್ಲೆಂಡ್): ಜಗಜ್ಯೋತಿ ಬಸವೇಶ್ವರರ 891ನೇ ಜನ್ಮದಿನವನ್ನು ಶನಿವಾರ (ಮೇ 11 ರಂದು) ಲಂಡನ್ನಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಲಂಡನ್ನಲ್ಲಿರುವ ಬಸವೇಶ್ವರ ಪ್ರತಿಮೆಗೆ ಬ್ರಿಟಿಷ್ ಮತ್ತು ಭಾರತೀಯ ಸಮುದಾಯದ ಸದಸ್ಯರು ಪುಷ್ಪ ನಮನ ಸಲ್ಲಿಸಿದರು. ಯುನೈಟೆಡ್ ಕಿಂಗ್ಡಮ್ನ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಲಂಡನ್ ಬರೋ ಆಫ್ ಲ್ಯಾಂಬೆತ್ನಲ್ಲಿರುವ ಬಸವೇಶ್ವರ ಸ್ಮಾರಕಕ್ಕೆ ಮುಖಂಡರು ಗೌರವ ಸಲ್ಲಿಸಿದರು.
ಸಾಮಾಜಿಕ ಕ್ರಾಂತಿಯ ಹರಿಕಾರ ಬಸವೇಶ್ವರ ಅವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯಾಗಿ ಘೋಷಿಸಿದ್ದಕ್ಕಾಗಿ ನಾವು ಕರ್ನಾಟಕ ಸರ್ಕಾರಕ್ಕೆ ಹಾಗೂ ಕರ್ನಾಟಕದ ಮೂರು ಪ್ರಮುಖ ರಾಜಕೀಯ ಪಕ್ಷಗಳಿಗೆ ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಯುನೈಟೆಡ್ ಕಿಂಗ್ಡಮ್ನ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ತಿಳಿಸಿದೆ.
2015ರ ನವೆಂಬರ್ 14 ರಂದು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಭಾರತದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಅಕ್ಟೋಬರ್ 26, 2018 ರಂದು ಲಂಡನ್ಗೆ ಭೇಟಿ ನೀಡಿ ಬಸವೇಶ್ವರರ ಪ್ರತಿಮೆ ನಮನ ಸಲ್ಲಿಸಿದ್ದರು. 5 ಮಾರ್ಚ್ 2023 ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಇಲ್ಲಿನ ಪ್ರತಿಮೆಗೆ ಗೌರವ ಸಲ್ಲಿಸಿದ್ದರು.
ಥೇಮ್ಸ್ ನದಿಯ ಮೇಲಿರುವ ಬ್ರಿಟಿಷ್ ಸಂಸತ್ತಿನ ಹಿನ್ನೆಲೆಯಲ್ಲಿ ಬಸವೇಶ್ವರ ಮೂರ್ತಿ ಸ್ಥಾಪಿಸಿರುವುದಕ್ಕೆ ಈ ಎಲ್ಲ ನಾಯಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ ಎಂದು ಲಂಡನ್ ಬರೋ ಆಫ್ ಲ್ಯಾಂಬೆತ್ನ ಮಾಜಿ ಮೇಯರ್ ಹಾಗೂ ಲ್ಯಾಂಬೆತ್ ಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷ ಡಾ. ನೀರಜ್ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.