ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ, ಕಾಂಗ್ರೆಸ್​ಗೆ ಬೆಂಬಲ ಘೋಷಣೆ!

JDS Congress
Published on

ವಿಜಯಪುರ: ರಾಜ್ಯ ವಿಧಾನ ಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವ ಬೆನ್ನಲ್ಲೇ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ ಅಧಿಕೃತವಾಗಿ ಬೆಂಬಲ ಸೂಚಿಸಿದ್ದಾರೆ.

ವಿಜಯಪುರ ನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಂದೇನವಾಜ್ ಮಹಾಬರಿ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್‌ ಹಮೀದ್ ಮುಶ್ರೀಫ್‌ಗೆ ಬೆಂಬಲ ಸೂಚಿಸಿದ್ದಾಗಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಗರದಲ್ಲಿ ಕಾಂಗ್ರೆಸ್‌ಗೆ ಒಳ್ಳೆಯ ವಾತಾವರಣ ಇದ್ದು ಕಣದಿಂದ ಹಿಂದೆ ಸರಿಯುವುದು ಸೂಕ್ತ ಎಂದು ಹಿರಿಯರು ಸಲಹೆ ಕೊಟ್ಟಿದ್ದಾರೆ. ನನಗೂ ಕೂಡ ಜೆಡಿಎಸ್ ಪಕ್ಷದ ಟಿಕೆಟ್ ಕೊನೆಯ ಕ್ಷಣದಲ್ಲಿ ನೀಡಿದ್ದರಿಂದ ಕಡಿಮೆ ಸಮಯದಲ್ಲಿ ಚುನಾವಣೆ ಎದುರಿಸುವುದು ಕಷ್ಟವಾಗಲಿದೆ. ಹೀಗಾಗಿ ಚುನಾವಣೆ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಅಭ್ಯರ್ಥಿಗೆ ನನ್ನ ಸಂಪೂರ್ಣ ಬೆಂಬಲ ಸೂಚಿಸಲು ಸ್ಪಷ್ಟ ನಿರ್ಧಾರ ಪ್ರಕಟಿಸುತ್ತಿರುವುದಾಗಿ ತಿಳಿಸಿದರು.

ಯಾರದ್ದೇ ಒತ್ತಡದಿಂದ ಕಣದಿಂದ ಹಿಂದೆ ಸರಿಯುತ್ತಿಲ್ಲ. ಈ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರಿಗೆ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿಯೇ ಈ ನಿರ್ಧಾರ ಕೈಗೊಳ್ಳುತ್ತಿದ್ದೇನೆ. ಇದು ಪಕ್ಷದ ನಿರ್ಧಾರವಲ್ಲ, ನನ್ನ ವೈಯಕ್ತಿಕ ನಿರ್ಧಾರ. ಕುಮಾರಸ್ವಾಮಿ ಅವರು ಕೂಡ ಎಲ್ಲಿ ಕಾಂಗ್ರೆಸ್ ಶಕ್ತಿ ಹೆಚ್ಚಿದೆಯೋ ಅಲ್ಲಿ ಜೆಡಿಎಸ್ ಅಭ್ಯರ್ಥಿ ಶಕ್ತಿ ತುಂಬಬೇಕೆಂದು ಭಾಷಣದಲ್ಲಿ ಹೇಳಿದ್ದರು. ಹೀಗಾಗಿ ವಿಜಯಪುರ ನಗರ ಕ್ಷೇತ್ರದ ಮತದಾರ ಪ್ರಭುಗಳು ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಬೇಕೆಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net