

ಬೆಂಗಳೂರು:
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಜಿ.ಟಿ.ದೇವೇಗೌಡ ಅವರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾದ ಮೇಲೆ ಶಾಸಕಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಖಾಲಿಯಾಗಿದೆ.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು ಅವರು ಆಕಾಂಕ್ಷಿಯಾಗಿದ್ದು, ಈ ನಿಟ್ಟಿನಲ್ಲಿ ವರಿಷ್ಠರನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದರು.
ಏತನ್ಮಧ್ಯೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿರುವ ಜಿ.ಟಿ.ದೇವೇಗೌಡರು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ತಾನೂ ಆಕಾಂಕ್ಷಿ ಎಂದು ವರಿಷ್ಠರಿಗೆ ತಿಳಿಸಿದ್ದಾರೆ.
ಶಾಸಕಾಂಗ ಪಕ್ಷದ ನಾಯಕನನ್ನಾಗಿ ಮಾಡಿದರೆ, ಕೋರ್ ಕಮಿಟಿ ಅಧ್ಯಕ್ಷ ಸ್ಥಾನ ತೊರೆಯವುದಾಗಿ ತಿಳಿಸಿದ್ದಾರೆ. ಆದ್ದರಿಂದ ಕೋರ್ ಕಮಿಟಿ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಬಾಬು ಅವರನ್ನು ನೇಮಕ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಅಧಿವೇಶನ ಸೋಮವಾರದಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಜೊತೆಗೆ ಸಮಾಲೋಚನೆ ನಡೆಸಿ ಎಚ್.ಡಿ.ಕುಮಾರಸ್ವಾಮಿ ಅವರು ಸ್ಪೀಕರ್‌ಗೆ ಪತ್ರ ಕಳುಹಿಸಿಕೊಡಲಿದ್ದಾರೆ.