ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್ ಪ್ರತಿಭಟನೆ

j por
Published on

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಿರುದ್ಧ ಜಾತ್ಯತೀತ ಜನತಾದಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ನಗರದ ಪ್ರೀಢಂ ಪಾರ್ಕ್‌ನಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಅವರಿಬ್ಬರ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ, ಡಿಕೆಶಿ ಮತ್ತು ಶಿವರಾಮೇಗೌಡ ವಿರುದ್ಧ ಕೂಡಲೇ ಎಸ್‌ಐಟಿ ಕೇಸ್ ದಾಖಲಿಸಿ ವಿಚಾರಣೆ ನಡೆಸಬೇಕು, ಉಪ ಮುಖ್ಯಮಂತ್ರಿ ಹುದ್ದೆಯಿಂದ ಡಿಕೆಶಿಯನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್‌ಗೌಡ, ಡಿಸಿಎಂ ಶಿವಕುಮಾರ್ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ದೇವೇಗೌಡರ ಕುಟುಂಬದ ವಿರುದ್ಧ ಹಗೆತನ ಸಾಧಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸೋಲಿನ ಭಯದಿಂದ ಅವರು ಇದನ್ನೆಲ್ಲ ಮಾಡುತ್ತಿದ್ದಾರೆ, ತಮ್ಮ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಅವರನ್ನು ಮುಖ್ಯಮಂತ್ರಿಗಳು ತಕ್ಷಣವೇ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಡಿ.ಕೆ.ಶಿವಕುಮಾರ್ ಅಶ್ಲೀಲ ಪೆನ್ ಡ್ರೈವ್ ಹಂಚಿಕೆಯಲ್ಲಿ ಶಾಮೀಲಾಗಿದ್ದಾರೆ. ಶಿವರಾಮೇಗೌಡ, ದೇವರಾಜೇಗೌಡ ನಡುವಿನ ಮೊಬೈಲ್ ಸಂಭಾಷಣೆ ಇದನ್ನು ಬಹಿರಂಗ ಮಾಡಿದೆ. ಕೂಡಲೇ ತನಿಖಾ ತಂಡ ಇವರಿಬ್ಬರಿಗೂ ಸಮನ್ಸ್ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಈ ರಾಜ್ಯಕ್ಕೆ ಎರಡು ಸಲ ಮುಖ್ಯಮಂತ್ರಿ ಆಗಿದ್ದ ಕುಮಾರಸ್ವಾಮಿ ಅವರ ಬಗ್ಗೆ ಮದ್ದೂರು ಶಾಸಕ ಲಘುವಾಗಿ ಮಾತನಾಡಿದ್ದಾರೆ ಎಂದು ರಮೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ಹಿರಿಯ ಮುಖಂಡ ಜವರಾಯಿಗೌಡ, ನಗರ ಘಟಕದ ಕಾರ್ಯಾಧ್ಯಕ್ಷರಾದ ರೇವಣ್ಣ, ನಗರ ಯುವ ಜನತಾದಳ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ತಿಮ್ಮೇಗೌಡ, ಅಂದಾನಯ್ಯ, ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಜಾ ರಾವ್, ಕನ್ಯಾಕುಮಾರಿ, ಮಂಗಳಾ, ಗೋಪಾಲ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net