

ತುಮಕೂರು: ಕೇಂದ್ರದಲ್ಲಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಭಾರತವನ್ನು ವಿಶ್ವದ ನಂ.1 ರಾಷ್ಟ್ರವನ್ನಾಗಿ ನಿರ್ಮಿಸಲು ಹಗಲಿರುಳು ಶ್ರಮಿಸುತ್ತಿದೆ. ಈ ಗುರಿ ನಿರ್ಮಾಣಕ್ಕೆ ಪೂರಕವಾಗಿ ಜಿಲ್ಲೆಯಲ್ಲಿ ನನ್ನನ್ನು ಸೇರಿ ಬಿಜೆಪಿಯನ್ನು ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲಿಸಬೇಕಿದೆ ಎಂದು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.
ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸದಾಶಿನಗರ ಹಾಗೂ ಕುಣಿಗಲ್ ರಸ್ತೆಯ ಎರಡೂ ಬದಿಯ ಅಂಗಡಿ, ಮುಂಗಟ್ಟುಗಳಿಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ಮತಯಾಚನೆ ಮಾಡಿದ ಅವರು, ರಾಜ್ಯದಲ್ಲಿ ಮತ್ತೆ ಡಬಲ್ ಇಂಜಿನ್ ಸರ್ಕಾರ ಬರಲು ಜನರು ಆಶೀರ್ವದಿಸಬೇಕು. ಯಾವುದೇ ಆಮಿಷ, ಅಪಪ್ರಚಾರಗಳಿಗೆ ಕಿವಿಗೊಡದೆ ಬಿಜೆಪಿ ಬೆಂಬಲಿಸಿ ಎಂದರು.
ಕಳೆದ 5 ವರ್ಷಗಳಲ್ಲಿ ತುಮಕೂರು ನಗರಕ್ಕೆ ನರೇಂದ್ರ ಮೋದಿ ಅವರ ಕನಸಿನ ಸ್ಮಾರ್ಟ್‌ಸಿಟಿ ಯೋಜನೆಯ ಮೂಲಕ ಸುಮಾರು 950 ಕೋಟಿ ರೂಪಾಯಿ ಮುಖ್ಯಮಂತ್ರಿಗಳ ವಿಶೇಷ ಅನುದಾನ, 15ನೇ ಹಣಕಾಸು ಯೋಜನೆ, ಅಮೃತ್, ಎಸ್‌ಇಪಿ-ಟಿಎಸ್‌ಪಿ ಯೋಜನೆ ಅಡಿ ನೂರಾರು ಕೋಟಿ ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಲಾಗಿದೆ. ರಸ್ತೆಗಳು, ಉದ್ಯಾನವನಗಳನ್ನು ಅಭಿವೃದ್ಧಿ ಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ನಗರ ಮತ್ತಷ್ಟು ಅಭಿವೃದ್ಧಿಯಾಗಲು ನೀವೆಲ್ಲರೂ ಬಿಜೆಪಿಗೆ ಮತ ನೀಡಬೇಕೆಂದು ಮನವಿ ಮಾಡಿದರು.
ಪ್ರಧಾನಿ ಮೋದಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗ್ಗೆ ಮತಯಾಚನೆ ನಡೆಸಿದ ಜ್ಯೋತಿಗಣೇಶ್, ಸದಾಶಿವನಗರ ಹಾಗು ಬನಶಂಕರಿಯಲ್ಲಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಹಿರಿಯ ಕಾರ್ಯಕರ್ತರು, ಪಕ್ಷದ ಮುಖಂಡರು ಸಾಥ್ ನೀಡಿದರು.