ಕೆ-ಸೆಟ್: 13ರಿಂದ ದಾಖಲೆ ಪರಿಶೀಲನೆ, ಸಿಎಂ ಅವರಿಂದ ಪ್ರಮಾಣಪತ್ರ ವಿತರಣೆ

kea
Published on

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ - 2024 (ಕೆ-ಸೆಟ್)ಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಕಟಗೊಂಡಿರುವ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯು ಜ.13ರಂದು ಆರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣಪತ್ರ ನೀಡುವ ಪ್ರಕ್ರಿಯೆಗೆ ಅಂದು ಚಾಲನೆ ನೀಡಲಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಜ.20ರವರೆಗೆ ತಾತ್ಕಾಲಿಕ ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಯಲಿದ್ದು, ದಾಖಲೆಗಳು ಸಮರ್ಪಕವಾಗಿದ್ದರೆ ಸ್ಥಳದಲ್ಲೇ ಪ್ರಮಾಣಪತ್ರ ನೀಡಲಾಗುವುದು. ಜ.13ರಂದು ಮುಖ್ಯಮಂತ್ರಿಯವರು ಕೆಇಎ ಕಚೇರಿಯಲ್ಲಿ ಹೆಚ್ಚುವರಿ ಕಟ್ಟಡದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಅದೇ ಸಂದರ್ಭದಲ್ಲಿ ಪ್ರಮಾಣಪತ್ರ ನೀಡುವ ಪ್ರಕ್ರಿಯೆಗೂ ಚಾಲನೆ ನೀಡಲಿದ್ದಾರೆ.

ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಾದ ಬಗೆಗಿನ ಮಾಹಿತಿಯನ್ನು ಪ್ರಾಧಿಕಾರದ ವೆಬ್ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದಂದೇ ಹಾಜರಾಗಬೇಕು. ನಿಗದಿ ಪಡಿಸಿದ ದಿನಾಂಕದಂದು ಹಾಜರಾಗದ ಅಭ್ಯರ್ಥಿಗಳಿಗೆ ಇತರೆ ದಿನಾಂಕದಂದು ಮೂಲ ದಾಖಲೆಗಳ ಪರಿಶೀಲನೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಕೆಇಎ ವೆಬ್ಸೈಟ್‌ಗೆ ಭೇಟಿ ನೀಡಲು ಸೂಚಿಸಿದ್ದಾರೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಸೇರಿ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net