

ಕೋಲಾರ: ಮತದಾನ ಪ್ರಕಿಯೆ ಮುಗಿದಿದ್ದು, ಅಭ್ಯರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಈ ನಡುವೆ ಪಕ್ಷದ ಕಾರ್ಯಕರ್ತರು ಹೊಡೆದಾಡಿಕೊಂಡಿರುವ ಬಗ್ಗೆ ವಿವಿಧೆಡೆ ವರದಿಯಾಗುತ್ತಿವೆ. ಇದೀಗ ಕ್ಷುಲ್ಲಕ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಈ ಘಟನೆ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದಿದೆ.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ತಜಮುಲ್ ಹಲ್ಲೆಗೊಳಗಾದ ವ್ಯಕ್ತಿ. ಜೆಡಿಎಸ್ ಪಕ್ಷದ ಮುಖಂಡ ಸಾಧಿಕ್, ಆರೀಫ್ ಸೇರಿದಂತೆ ಇನ್ನಿತರಿಬ್ಬರ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಸದ್ಯ ಹಲ್ಲೆಗೊಳಗಾದ ಕಾಂಗ್ರೆಸ್ ಪಕ್ಷದ ಮುಖಂಡ ತಜಮುಲ್ನನ್ನು ಚಿಕಿತ್ಸೆಗಾಗಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಲ್ಲೆಗೊಳಗಾದ ತಜಮುಲ್ ಚಿಕಿತ್ಸೆಗೆ ದಾಖಲಾಗುತ್ತಿದ್ದಂತೆ, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ. ಸದ್ಯ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ಧಾರೆ.