

ರಾಮನಗರ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ನಿಖಿಲ್ ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ಮಾಡಿ ಸಾಂತ್ವಾನ ಹೇಳಿದ್ದಾರೆ. ರಾಮನಗರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ದ ಸೋಲು ಅನುಭವಿಸಿದ್ದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದರು. ಇದೀಗ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ನಿಖಿಲ್ ಕುಮಾರಸ್ವಾಮಿಗೆ ಡಿಕೆಶಿ ಸಾಂತ್ವಾನ ಹೇಳುವ ಮೂಲಕ ಧೈರ್ಯ ತುಂಬಿದ್ದಾರೆ.
'ನೀನು ಎರಡು ಬಾರಿ ಚುನಾವಣೆಯಲ್ಲಿ ಸೋತು ಅನುಭವಿಸಿದ್ದೀಯ. ನಿನಗೆ ರಾಜಕೀಯ ಕುಟುಂಬದ ಹಿನ್ನಲೆ ಇದೆ. ನನಗೆ ಯಾವುದೇ ರಾಜಕೀಯ ಹಿನ್ನಲೆ ಇಲ್ಲದೇ ಇಷ್ಟು ಎತ್ತರಕ್ಕೆ ಬೆಳೆದಿದ್ದೇನೆ. ಈ ಸೋಲಿನಿಂದ ಕಂಗೆಡಬೇಡ, ಕ್ಷೇತ್ರದಲ್ಲಿ ಓಡಾಟ ನಡೆಸಿ ಜನರೊಂದಿಗೆ ನಿಲ್ಲಬೇಕು. ಸೋಲಿನಿಂದ ಹತಾಶನಾಗಬೇಡ. ರಾಜಕೀಯದಲ್ಲಿ ಏಳು- ಬೀಳು ಸಹಜ. ಮುಂದಿನ ದಿನಗಳಲ್ಲಿ ನಿನಗೆ ರಾಜಕೀಯದಲ್ಲಿ ಭವಿಷ್ಯ ಇದೆ' ಎಂದು ಡಿಕೆಶಿ ಹಾರೈಸಿದ್ದಾರೆ.
ನನ್ನನ್ನು ಅತ್ಯಂತ ಪ್ರೀತಿಯಿಂದ ಬೆಂಬಲಿಸಿ ಆಶೀರ್ವದಿಸಿದ ರಾಮನಗರ ವಿಧಾನಸಭೆ ಕ್ಷೇತ್ರದ ಮಹಾಜನತೆಗೆ ನನ್ನ ಶಿರಸಾಷ್ಟಾಂಗ ನಮನಗಳು. ಈ ಒಂದು ಸೋಲು ನಿಮ್ಮ ಸೇವೆ ಮಾಡಬೇಕು ಎನ್ನುವ ನನ್ನ ಅದಮ್ಯ ಸಂಕಲ್ಪಕ್ಕೆ ತಡೆ ಒಡ್ಡಲಾರದು. ನಾನೆಂದೂ ನಿಮ್ಮ ಜತೆಯಲ್ಲೇ ಇರುತ್ತೇನೆ, ನಿಮಗಾಗಿ ಜೀವಿಸುತ್ತೇನೆ. ಸೋಲನ್ನು ಸಮಚಿತ್ತದಿಂದ ಸ್ವಿಕರಿಸಿ ಮುನ್ನಡೆಯುತ್ತೇನೆ. ಅದು ನಾನು ನನ್ನ ಪೂಜ್ಯ ತಾತನವರಾದ ಶ್ರೀ ಹೆಚ್.ಡಿ.ದೇವೇಗೌಡ ಸಾಹೇಬರಿಂದ, ತಂದೆ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಕಲಿತ ಪಾಠ. ಎಡವಿದ್ದೇನೆ, ಮತ್ತೆ ಎದ್ದು ಓಡುತ್ತೇನೆ. ಬಿದ್ದ ಮಗುವನ್ನು ಮೇಲೆತ್ತುವ ನಿಮ್ಮ ಪ್ರೀತಿ, ವಾತ್ಸಲ್ಯವನ್ನು ನಾನು ಬಲ್ಲೆ.
ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಜಾತ್ಯತೀತ ಜನತಾದಳವನ್ನು ಹರಸಿದ ಸಾರ್ವಜನಿಕ ಬಂಧುಗಳನ್ನು ಇಲ್ಲಿ ಸ್ಮರಿಸುತ್ತೇನೆ. ಸೋಲಿನಿಂದ ಕಂಗೆಟ್ಟು ಜನರಿಂದ ದೂರವಾಗುವ ಜಾಯಮಾನ ನಮ್ಮದಲ್ಲ. ಈ ಪರಾಜಯದಿಂದ ಪಾಠ ಕಲಿಯುತ್ತೇವೆ, ಪುನಾ ಪುಟಿದೆದ್ದು ಬರುತ್ತೇವೆ. ಪ್ರತಿಯೊಬ್ಬರಿಗೂ ಪ್ರಣಾಮಗಳು ಎಂದು ಸೋಲಿನ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು.