

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಕಾಂಗ್ರೆಸ್ ಶಾಸಕ (Congress MLA) ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಬಿಗ್ ರಿಲೀಫ್ ನೀಡಿದೆ. ಆರೋಪಿಗಳಿಗೆ ವಿಧಿಸಿದ್ದ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಹೈಕೋರ್ಟ್ ಆದೇಶಿಸಿದೆ.
ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಧಿಸಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವು ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ಶಿಕ್ಷೆಯನ್ನು ಅಮಾನತ್ತಿನಲ್ಲಿಡುವಂತೆ ಸೂಚಿಸಿದೆ.
6 ವಾರದಲ್ಲಿ ದಂಡದ ಮೊತ್ತದ ಶೇ.25ರಷ್ಟು ಠೇವಣಿ ಕೋರ್ಟ್ನಲ್ಲಿ ಇಡುವಂತೆ ಅಪರಾಧಿಗಳಿಗೆ ಸೂಚಿಸಿ ಶಿಕ್ಷೆ ಅಮಾನತಿನಲ್ಲಿಟ್ಟು ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಪ್ರಕರಣದ ಇತರೆ ಆರೋಪಿಗಳು ಶೀಘ್ರವೇ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.
ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಶಾಸಕ ಸತೀಶ್ ಸೈಲ್ ಸೇರಿದಂತೆ ಏಳು ಅಪರಾಧಿಗಳಿಗೆ ಶಿಕ್ಷಿ ವಿಧಿಸಿ ತೀರ್ಪು ನೀಡಿತ್ತು. ಒಟ್ಟು ಆರು ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ ಹಾಗೂ ಭಾರೀ ಮೊತ್ತದ ದಂಡವನ್ನು ವಿಧಿಸಿತ್ತು.