

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಐದು ಜಿಲ್ಲೆಗಳಲ್ಲಿ ಏಪ್ರಿಲ್ 6 ರವರೆಗೆ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಬಿಸಿಲಿನ ಝಳ ಏರುತ್ತಿದ್ದು, ಜನರನ್ನು ಹೈರಾಣಾಗಿಸಲಿದೆ. ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ. ಏಪ್ರಿಲ್ 7 ರಿಂದ 9 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ-ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಬರುವ ನಿರೀಕ್ಷೆಯಿದೆ.
ಏಪ್ರಿಲ್ 5ರಂದು ಬಾಗಲಕೋಟೆ, ಕಲಬುರಗಿ, ವಿಜಯಪುರ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ರಾತ್ರಿ ಹೊತ್ತು ಸೆಕೆಯ ವಾತಾವರಣವು ಇರಲಿದೆ.
ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಹಾಸನ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಹಾವೇರಿ, ಬಾಗಲಕೋಟೆ, ಬೆಳಗಾವಿ, ಧಾರವಾಡದಲ್ಲಿ ಗರಿಷ್ಠ ತಾಪಮಾನವು ಕ್ರಮೇಣ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಹೆಚ್ಚಾಗಲಿದೆ.
ಏಪ್ರಿಲ್ 7 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗಿರಲಿದೆ.