

ದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬೆಂಬಲ ಸೂಚಿಸಿದ್ದಾರೆ.
ಈ ಕುರಿತು ಹೇಳಿಕೆಯನ್ನ ಬಿಡುಗಡೆ ಮಾಡಿರುವ ಕೇಜ್ರಿವಾಲ್ ವಿರೋಧ ಪಕ್ಷಗಳ ಮುಖಂಡರನ್ನ ನಿರ್ಮೂಲನೆ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯೇತರ ಪಕ್ಷಗಳು ಹಾಗೂ ಮುಖಂಡರ ವಿರುದ್ದ ಕಾನೂನು ಕ್ರಮ ಜರುಗಿಸುವ ಮೂಲಕ ಅವರನ್ನ ಇಲ್ಲವಾಗಿಸಲು ಪಿತೂರಿ ನಡೆಸಲಾಗಿದೆ. ಕಾಂಗ್ರೆಸ್ ಪಕ್ಷದ ಜೊತೆ ನಮಗೆ ಕೆಲವು ಭಿನ್ನಾಭಿಪ್ರಾಯವಿರಬಹುದು. ಆದರೆ, ಮಾನನಷ್ಟ ಮೊಕದ್ದಮೆಯಂತಹ ಪ್ರಕರಣದಲ್ಲಿ ರಾಹುಲ್ ಗಾಂಧಿಯವರನ್ನ ಸಿಲುಕಿಸಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ನ್ಯಾಯಾಲಯದ ತೀರ್ಪನ್ನ ನಾವು ಗೌರವಿಸುತ್ತೇವೆ. ಆದರೆ, ಈ ನಿರ್ಣಯಕ್ಕೆ ನನ್ನ ಸಹಮತವಿಲ್ಲ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.