ಸಿಬಿಐಗೆ ಕೇರಳ ಸರ್ಕಾರ ತಡೆ

CBI
Published on

ತಿರುವನಂತಪುರ: ರಾಜ್ಯದಲ್ಲಿ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯಲು ಕೇರಳ ಸರ್ಕಾರ ಬುಧವಾರ ನಿರ್ಧರಿಸಿದೆ.

ಮಹಾರಾಷ್ಟ್ರ ಸರ್ಕಾರ ಕೆಲ ದಿನಗಳ ಹಿಂದಷ್ಟೆ ಇಂಥ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಸಿಬಿಐ ಕೇರಳದಲ್ಲಿ ಯಾವುದೇ ಪ್ರಕರಣದ ತನಿಖೆ ನಡೆಸಬೇಕಾದರೆ ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕಾಗುತ್ತದೆ. ವಸತಿಹೀನರಿಗೆ ಮನೆ ಕಟ್ಟಿಕೊಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಲೈಫ್ ಮಿಷನ್’ ಯೋಜನೆಯ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿರುವುದೇ ಈ ಕ್ರಮ ಕೈಗೊಳ್ಳಲು ಕಾರಣ ಎಂದು ಹೇಳಲಾಗಿದೆ.

ಸಿಬಿಐ ಪ್ರಕರಣ ದಾಖಲಿಸಿದ ನಂತರ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಹೈಕೋರ್ಟ್ ಮೊರೆ ಹೋಗಿದ್ದು, ಸಿಬಿಐ ತನಿಖೆಗೆ ಎರಡು ತಿಂಗಳ ತಡೆ ನೀಡಲಾಗಿದೆ. ಬಿಜೆಪಿಯೇತರ ಆಡಳಿತದ ರಾಜ್ಯಗಳಾದ ಪಶ್ಚಿಮ ಬಂಗಾಳ, ರಾಜಸ್ಥಾನ ಕೂಡ ಇತ್ತೀಚೆಗೆ ಸಿಬಿಐ ತನಿಖೆಗೆ ಅನುಮತಿ ವಾಪಸ್ ಪಡೆದಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net