

ಕೊಚ್ಚಿ: ಕೇರಳದ ಕಲ್ಲಿಯೂರಿನ ತರಗತಿಯೊಂದರಲ್ಲಿ ವಿದ್ಯಾರ್ಥಿಯೊಬ್ಬ ಪೆಪ್ಪರ್ ಸ್ಪ್ರೇ (Pepper spray) ಬಳಸಿದ ನಂತರ 9 ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕರ ಸ್ಥೀತಿ ಗಂಭೀರವಾಗಿದ್ದು, ಅವರನ್ನು ತಿರುವನಂತಪುರಂನ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಬುಧವಾರ (ಅ.16) ವರದಿ ಬಂದಿದೆ.
ಕೇರಳದ ಪುನ್ನಮೂಡಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿಯೊಬ್ಬ ಪೆಪ್ಪರ್ ಸ್ಪ್ರೇ ತಂದು ಫ್ಯಾನ್ ಅಡಿಗೆ ಸಿಂಪಡಿಸಿದ್ದಾನೆ. ಇದು ಗಾಳಿಯಲ್ಲಿ ಹರಡಿದ್ದರಿಂದ ಇತರ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಈ ವೇಳೆ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಲು ಬಂದಂತಹ ಶಿಕ್ಷಕರ ಮೇಲೂ ಪರಿಣಾಮ ಬೀರಿದ್ದು, ಅಲ್ಲಿಯೇ ಕುಸಿದುಬಿದ್ದಿದ್ದಾರೆ ಎಂದು ವರದಿಯಾಗಿದೆ.
ಶಾಲೆಯ ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಿದ್ದು, ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಘಟನೆ ಬಗ್ಗೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾತನಾಡಿದ್ದು, ಗಾಯಗೊಂಡ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯಕೀಯ ಕಾಲೇಜಿನ ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಆರೋಗ್ಯ ಚೇತರಿಸಿಕೊಂಡಿದೆ. ಒಬ್ಬ ವಿದ್ಯಾರ್ಥಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಆತನನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವೈದ್ಯರು ಸುದ್ದಿಮೂಲಗಳಿಗೆ ತಿಳಿಸಿದ್ದಾರೆ. (ಏಜೆನ್ಸೀಸ್)