

ತಿರುವನಂತಪುರಂ: ಕೇರಳದಾದ್ಯಂತ ಡಿಸೆಂಬರ್ 4ರವರೆಗೆ ವ್ಯಾಪಕ ಮಳೆಯ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ (IMD) 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್ ಮತ್ತು ಕಣ್ಣೂರುಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.(Kerala Weather)
ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆಯಾಗಲಿದೆ ಎಂದು ಹೇಳಿದ್ದು ಡಿಸೆಂಬರ್ 2 ಮತ್ತು 3ರಂದು ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಸೂಚಿಸಿದೆ. ಇದಲ್ಲದೆ ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹಾಗೂ ಪತ್ತನಂತಿಟ್ಟ , ಅಲಪ್ಪುಳ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್ , ಕಣ್ಣೂರು ಮತ್ತು ಕಾಸರಗೋಡುಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆಯ ಎಚ್ಚರಿಕೆಯಿಂದಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (ಎಸ್‌ಡಿಎಂಎ), ಭೂಕುಸಿತ ಮತ್ತು ಮಣ್ಣು ಕುಸಿತದ ಪ್ರದೇಶಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರಿ ಮತ್ತು ಅಧಿಕಾರಿಗಳ ನಿರ್ದೇಶನದಂತೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಲು ಸೂಚಿಸಿದೆ. ನದಿ ದಡದಲ್ಲಿ ಮತ್ತು ಅಣೆಕಟ್ಟು ಜಲಾನಯನ ಪ್ರದೇಶಗಳಲ್ಲಿ ವಾಸಿಸುವವರೂ ಅಧಿಕಾರಿಗಳ ಸೂಚನೆಯಂತೆ ಸ್ಥಳಾಂತರಿಸಬೇಕು ಎಂದು ಅದು ಹೇಳಿದೆ.(ಏಜೆನ್ಸೀಸ್)