

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ವಿಧಾನಸಭೆ ಚುನಾವಣೆ ವೇಳೆ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜೂನ್ 1ರಂದು ಜಾರಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾರಿ ಮಾಡಿದೆ.
ಗೃಹಜ್ಯೋತಿ ಯೋಜನೆ ಕುರಿತು ಸಾರ್ವಜನಿಕ ವಲಯಗಳಲ್ಲಿ ಹಲವು ಅನುಮಾನಗಳಿದ್ದು ಈ ಕುರಿತಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟೀಕರಣವನ್ನು ನೀಡಿದ್ದಾರೆ.
ಈ ಕುರಿತು ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಜಾರ್ಜ್ ರಾಜ್ಯದಲ್ಲಿ 200ಯೂನಿಟ್ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವ 2.16 ಕೋಟಿ ಜನರಿದ್ದಾರೆ. 2 ಲಕಷಕ್ಕಿಂತ ಹೆಚ್ಚಿನ ಗ್ರಾಹಕರು 200 ಯೂನಿಟ್ಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡುತ್ತಾರೆ.
ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಇದಕ್ಕಾಗಿ ಪ್ರತ್ಯೇಕ ಆ್ಯಪ್ ಒಂದನ್ನು ಅಭಿವೃದ್ದಿ ಪಡಿಸಲಾಗುತ್ತಿದೆ. ಸ್ವಂತ ಮನೆ ಅಥವಾ ಬಾಡಿಗೆ ಮನೆ ಇರಲಿ ಅರ್ಜಿ ಸಲ್ಲಿಸುವಾಗ ಕರಾರು ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ಹೊಸದಾಗಿ ಮನೆ ಕಟ್ಟಿದವರಿಗೆ, ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಾಡಿಗೆ ಮನೆಯಲ್ಲಿ ಇರುವವರಿಗೆ ಈ ಯೋಜನೆ ಸದ್ಯಕ್ಕೆ ಜಾರಿಯಾಗುವುದಿಲ್ಲ. ಇದರ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಸ್ಪಷ್ಟತೆಯನ್ನು ನೀಡುತ್ತೇವೆ. ಬೇರೆ ರಾಜ್ಯಗಳಿಂದ ಬಂದು ಇಲ್ಲಿ ವಾಸ ಇರುವವರಿಗೆ ಈ ಯೋಜನೆಯ ಲಾಭವನ್ನು ಪಡೆಯಬಹುದು. ಆದರೆ, ಆಧಾರ್ ಗುರುತಿನ ಚೀಟಿಯಲ್ಲಿ ಇಲ್ಲಿನ ವಿಳಾಸ ನಮೂದಿಸಿರಬೇಕು ಇಲ್ಲವಾದಲ್ಲಿ ಕಡ್ಡಾಯವಾಗಿ ಕರಾರು ಪತ್ರ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.
ವಿದ್ಯುತ್ ದರ ಏರಿಕೆ ಕುರಿತು ಪ್ರತಿಕ್ರಿಯಿಸಿ ನಮ್ಮ ಸರ್ಕಾರದ ಅವಧಿಯಲ್ಲಿ ದರ ಏರಿಕೆ ಮಾಡಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ವಿದ್ಯುತ್ ದರ ಏರಿಕೆ ಮಾಡಲಾಗಿತ್ತು. ಚುನಾವಣೆ ಇದ್ದ ಕಾರಣ ಆದೇಶ ಜಾರಿಯಾಗಿರಲಿಲ್ಲ. ಚುನಾವಣೆ ಮುಗಿದ ಬೆನ್ನಲ್ಲೇ ಹೊಸ ದರ ಜಾರಿಗೆ ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ. ಕಾಂಗ್ರೆಸ್ ಪಕ್ಷವು ಬಡವರು ಹಾಗೂ ಮಧ್ಯಮ ವರ್ಗದ ಜನರನ್ನು ರಕ್ಷಣೆ ಮಾಡುತ್ತಿದೆ. ಬಡವರು ಬಿಲ್ ಕಟ್ಟುವುದೇ ಬೇಡ ಎಂದು ಗೃಹಜ್ಯೋತಿ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.