ಡಿಸಿ ಕಚೇರಿ ಎದುರು ೨೮ ರಂದು ಜೆಡಿ(ಎಸ್) ಪ್ರತಿಭಟನೆ

IMG_20221125_113440-01 - Copy
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ


ಕೆ.ನಿಡುಗಣೆ ಗ್ರಾಮ ಪಂಚಾಯಿತಿಯಲ್ಲಿ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಕಟ್ಟಿರುವ ಮನೆ ಹಸ್ತಾಂತರ ಹಾಗೂ ಕೊಡಗಿನ ರಸ್ತೆ ದುಸ್ಥಿತಿ ಖಂಡಿಸಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದೆಂದು ಜೆಡಿ(ಎಸ್) ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ಹೇಳಿದ್ದಾರೆ.

ಎರಡು ತಿಂಗಳ ಹಿಂದೆಯೇ ಮನೆ ಕಾಮಗಾರಿ ಪೂರ್ಣಗೊಂಡಿದೆ. ಹೀಗಿದ್ದರೂ, ಉದ್ಘಾಟಿಸಲು ಮುಖ್ಯಮಂತ್ರಿ ಬರುತ್ತಾರೆಂದು ಸಂತ್ರಸ್ತರಿಗೆ ಮನೆ ಹಸ್ತಾಂತರಿಸುತ್ತಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತ ಪಡಿಸಿದರು.

ಕೊಡಗಿನ ಬಹುತೇಕ ರಸ್ತೆ ದುಸ್ಥಿತಿಗೆ ತಲುಪಿದ್ದು, ವಾಹನ ಚಾಲನೆಗೆ ಯೋಗ್ಯವಾಗಿಲ್ಲ. ತಕ್ಷಣ ಕಾಮಗಾರಿ ಪ್ರಾರಂಭಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗುತ್ತದೆ. ಒಂದು ವಾರದೊಳಗೆ ತಮ್ಮ ಬೇಡಿಕೆ ಈಡೇರದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದೆಂದರು.

ನ.೨೮ ರಂದು ಆಯೋಜಿಸಿರುವ ಪ್ರತಿಭಟನೆಯಲ್ಲಿ ಜೆಡಿ(ಎಸ್) ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ವಿದ್ಯಾರ್ಥಿ ಘಟಕ ರಾಜ್ಯಾಧ್ಯಕ್ಷ ಉಮೇಶ್ ಗೌಡ, ರಾಜ್ಯ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ಮತ್ತಿತರರು ಪಾಲ್ಗೊಳ್ಳಲಿದ್ದಾರೆಂದರು. ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಯಾವ ಕೆಲಸ ಕಾರ್ಯವೂ ನಡೆಯುತ್ತಿಲ್ಲ. ನಗರೋತ್ಥಾನ ೪ನೇ ಹಂತದ ಕಾಮಗಾರಿ ಕೂಡ ಕೈಗೆತ್ತಿಕೊಂಡಿಲ್ಲ ಎಂದು ಟೀಕಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷ ಅಭ್ಯರ್ಥಿಗಳ ಅಯ್ಕೆ ಇನ್ನೂ ನಡೆದಿಲ್ಲ. ಅಲ್ಪಸಂಖ್ಯಾತ ಘಟಕ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮಡಿಕೇರಿ ಕ್ಷೇತ್ರದ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದಾರೆ. ಉಳಿದಂತೆ ಯಾರೂ ಅರ್ಜಿ ಸಲ್ಲಿಸಿಲ್ಲ. ನಾನು ಅಭ್ಯರ್ಥಿ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಕೆ.ಎಂ.ಬಿ. ಗಣೇಶ್ ಹೇಳಿದರು.

ವಿರಾಜಪೇಟೆ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಜೆಡಿ(ಎಸ್) ನಲ್ಲಿ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಆದರೆ, ಮಡಿಕೇರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ. ಅಲ್ಪಸಂಖ್ಯಾತರು, ಒಕ್ಕಲಿಗರು, ಪರಿಶಿಷ್ಟ ಜಾತಿ- ಪಂಗಡದ ಮತದಾರರ ಬೆಂಬಲದೊಂದಿಗೆ ಮಡಿಕೇರಿಯಲ್ಲಿ ಗೆಲ್ಲುವ ಅವಕಾಶ ಇರುವುದರಿಂದ ನಾನು ಮಡಿಕೇರಿ ಕ್ಷೇತ್ರದ ಆಕಾಂಕ್ಷಿಯಾಗಿದ್ದೇನೆಂದು ಇಸಾಕ್ ಖಾನ್ ಹೇಳಿದರು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಪಿ.ಎ. ಮಂಜುನಾಥ್, ಕುಶಾಲನಗರ ತಾಲೂಕು ಅಧ್ಯಕ್ಷ ಪಿ.ಡಿ. ರವಿ, ಯುವ ಜೆಡಿ(ಎಸ್) ವಕ್ತಾರ ರವಿಕಿರಣ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಣೇಶ್ ಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net