ಕೆಪಿಟಿಸಿಎಲ್ ಹುದ್ದೆ: ರಾಜ್ಯಪಾಲರಿಗೆ ಪತ್ರ ಬರೆದ ವಿದ್ಯಾರ್ಥಿ ಸಂಘಟನೆ

mescom lineman
Published on

ಬೆಂಗಳೂರು: ಕೆಪಿಟಿಸಿಎಲ್ ಮತ್ತು ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಪೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಂಕಗಳು ಮತ್ತು ದೈಹಿಕ ಪರೀಕ್ಷೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಬದಲಾಗಿ ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ ನೇರ ನೇಮಕಾತಿ ಮಾಡಿಕೊಳ್ಳಬೇಕೆಂದು ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘವು ರಾಜ್ಯಪಾಲರಿಗೆ ಪತ್ರ ಬರೆದಿದೆ.

ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಪಿಯುಸಿ ಅಂಕಗಳ ಅಧಾರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಕೈಬಿಟ್ಟು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕೆಪಿಟಿಸಿಎಲ್ ಅಧಿಸೂಚನೆಗೂ ಇದೇ ನಿಮಯವನ್ನು ಜಾರಿಗೊಳಿಸಬೇಕೆಂದು ಸಂಘದ ಅಧ್ಯಕ್ಷ ಕಾಂತಕುಮಾರ್ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಕಿರಿಯ ಸ್ಪೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಸೇರಿ ಒಟ್ಟು 2,975 ಹುದ್ದೆಗಳನ್ನು ಎಸ್‌ಎಸ್‌ಎಲ್‌ಸಿ ಅಂಕಗಳು ಮತ್ತು ದೈಹಿಕ ಪರೀಕ್ಷೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಕೆಗೆ ನ.20ರವರೆಗೆ ಅವಕಾಶ ನೀಡಿದೆ. ಈ ರೀತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಹೊರತುಪಡಿಸಿ ಅಂಕಗಳ ಆಧಾರದ ನೇಮಕಾತಿಯು ಎಲ್ಲ ಹುದ್ದೆ ಆಕಾಂಕ್ಷಿಗಳಿಗೂ ನ್ಯಾಯ ಒದಗಿಸುವ ಕ್ರಮವಲ್ಲ ಎಂದು ಮನವಿ ಮಾಡಿದ್ದಾರೆ.

ಕರೊಣ ಬ್ಯಾಚ್‌ಗೆ ಅನುಕೂಲ:

ಕರೊನಾ ನಂತರದ ವರ್ಷಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳೇ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಇದರಿಂದ ಕರೊನಾ ಪೂರ್ವ ವರ್ಷಗಳಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಗೆ ಮತ್ತು ಈಗಾಗಲೇ ಇದೇ ಹುದ್ದೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ. ನೆರೆ ರಾಜ್ಯಗಳಲ್ಲಿಯೂ ಕೂಡ ಇದೇ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರವೇ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದೇ ನಿಯಮವನ್ನು ರಾಜ್ಯದಲ್ಲಿಯೂ ಅಳವಡಿಸಿಕೊಳ್ಳಬೇಕೆಂಬ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net