

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೀಡುವ ಮೂಲಕ ಡೆವಿಡೆಂಟ್ ಅನ್ನು ಸರ್ಕಾರಕ್ಕೆ ಹಸ್ತಾಂತರಿಸಿತು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು.
ಸಚಿವ ಎಂ.ಬಿ.ಪಾಟೀಲ್ ಅವರು ಮಾತನಾಡಿ, ಕೆಎಸ್ಡಿಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು ನಡೆಸಿ, 451 ಕೋಟಿ ರೂ. ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರ್ಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.
2022-23ರಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಸಂಸ್ಥೆಯ ವತಿಯಿಂದ ಸರ್ಕಾರಕ್ಕೆ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ 108 ಕೋಟಿ ರೂ. ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ 27 ಕೋಟಿ ರೂ. ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಇತರರಿದ್ದರು.