ಕೆಎಸ್‌ಡಿಎಲ್ ನಿಂದ ಸಿಎಂ ನಿಧಿಗೆ 135 ಕೋಟಿ ದೇಣಿಗೆ

CM
Published on

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ (ಕೆಎಸ್‌ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂ. ಅನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿತು.

ವಿಧಾನಸೌಧದಲ್ಲಿ ಶುಕ್ರವಾರ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮತ್ತು ಕೆಎಸ್‌ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಚೆಕ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಸ್ತಾಂತರ ಮಾಡಿದರು. ಈ ವೇಳೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ, ಕೆಎಸ್‌ಡಿಎಲ್ ಸಂಸ್ಥೆ ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂ. ವಹಿವಾಟು ನಡೆಸಿ 451 ಕೋಟಿ ರೂ. ಲಾಭ ಗಳಿಸಿತ್ತು.

ಈ ಪೈಕಿ ಶೇ.30 ಲಾಭಾಂಶವನ್ನು ಸರ್ಕಾರಕ್ಕೆ ಕೊಡಲಾಗಿದೆ. ಈ ಬಾರಿ ವಹಿವಾಟು, ಲಾಭ ಮತ್ತು ಲಾಭಾಂಶ ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಸಚಿವರು ತಿಳಿಸಿದರು. 2022-23ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಸ್ಥೆಯ ವತಿಯಿಂದ ಸರ್ಕಾರಕ್ಕೆ 54 ಕೋಟಿ ರೂ. ಲಾಭಾಂಶ ಕೊಡಲಾಗಿತ್ತು. 2023-24ರಲ್ಲಿ 108 ಕೋಟಿ ರೂ. ಲಾಭಾಂಶ ನೀಡಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ 27 ಕೋಟಿ ರೂ. ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಮತ್ತಷ್ಟು ಹೆಚ್ಚಲಿದೆ ಎಂದು ಎಂ.ಬಿ. ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ. ಸುಧಾಕರ, ಸಂತೋಷ ಲಾಡ್,ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net