ಸರ್ಕಾರಿ ಶಾಲೆಗಳಿಗೆ ಅನುದಾನದ ಕೊರತೆ

6spt1
ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ನಿವೃತ್ತ ಶಿಕ್ಷಕರುಗಳನ್ನು ಸನ್ಮಾನಿಸಲಾಯಿತು. ಡಾ.ಮಂತರ್‌ಗೌಡ, ಹರಪಳ್ಳಿ ರವೀಂದ್ರ, ಮೋಹನ್ ಕುಮಾರ್, ಎಸ್.ಜಿ.ಮೇದಪ್ಪ, ಕೆ.ಎಂ.ಲೋಕೇಶ್, ಎ.ಆರ್.ಮುತ್ತಣ್ಣ, ಚಂದ್ರಕಲಾ ಮತ್ತಿತರರು ಇದ್ದರು.
Published on

ಸೋಮವಾರಪೇಟೆ : ಸರ್ಕಾರಿ ಶಾಲೆಗಳಿಗೆ ಅನುದಾನದ ಕೊರತೆಯಿಂದಲೇ ಅನೇಕ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಬಂದಿದೆ ಎಂದು ಶಾಸಕ ಡಾ.ಮಂತರ್‌ಗೌಡ ಬೇಸರ ವ್ಯಕ್ತಪಡಿಸಿದರು.

ಶಾಂತಳ್ಳಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಭಾನುವಾರ ಆಯೋಜಿಸಿದ್ದ ಸಮಾರೋಪದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಹೆಚ್ಚಿನ ಅನುದಾನ ನೀಡಿ ಸುಸಜ್ಜಿತ ಕಟ್ಟಡಗಳನ್ನು ನಿರ್ಮಿಸಬೇಕು. ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಬೇಕು. ವಿದ್ಯಾರ್ಥಿಗಳಿಗೆ ಶಾಲಾ ವಾಹನದ ವ್ಯವಸ್ಥೆ ಮಾಡಬೇಕು. ಸರ್ಕಾರಿ ಶಾಲೆಗಳಲ್ಲೂ ಸಕಲ ಸೌಲಭ್ಯಗಳನ್ನು ನೀಡಿದರೆ, ಎಲ್ಲವೂ ಸರಿಯಾಗುತ್ತದೆ ಎಂದು ಹೇಳಿದರು.

ಖಾಸಗಿ ಮತ್ತು ಅನುದಾನಿತ ಶಾಲೆಗಳು ಹೆಚ್ಚಾಗಿವೆ. ಪ್ರಸ್ತುತ ಖಾಸಗಿ ಶಿಕ್ಷಣ ಸಂಸ್ಥೆಗಳತ್ತ ಪಾಲಕರ ಒಲವು ಹೆಚ್ಚಾಗಿದೆ. ಸಾಲ ಮಾಡಿಯಾದರೂ ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಸರ್ಕಾರಿ ಶಾಲೆಯಗಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ ಎಂಬುವ ಖಾತ್ರಿ ಪಾಲಕರಿಗೆ ಬರಬೇಕು. ಸರ್ಕಾರ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಚಿಂತನೆ ನಡೆಸಿ ಸರ್ಕಾರಿ ಶಾಲೆಗಳ ಉಳಿವಿಗಾಗಿ ಸರ್ಕಾರ ಹಾಗೂ ತಮ್ಮ ಸ್ವಂತ ಅನುದಾನವನ್ನು ನೀಡುವುದಾಗಿ ಘೋಷಿಸಿದರು.

ಶಾಲಾ ಹಂತದಲ್ಲಿನ 12 ವರ್ಷಗಳ ವಿದ್ಯಾರ್ಥಿ ಜೀವನ ಎಲ್ಲ ಮಕ್ಕಳ ಪಾಲಿಗೆ ಸುವರ್ಣ ಕಾಲವಾಗಿದೆ. ಬಾಲ್ಯದ ಜೀವನ ಮತ್ತೆಂದು ದೊರಕುವುದಿಲ್ಲ. ಹೀಗಾಗಿ ಶಾಂತಳ್ಳಿ ಸರ್ಕಾರಿ ಶಾಲೆಯಲ್ಲಿ ಶತಮಾನೋತ್ಸವ ಆಚರಿಸುತ್ತಿರುವುದು ಶ್ಲಾಘನೀಯ. ಶತಮಾನೋತ್ಸವ ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ದುಡಿದ ನಿವೃತ್ತ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳ ಸಂಗಮ ನಿಜಕ್ಕೂ ಅವಿಸ್ಮರಣೀಯ ಎಂದು ಬಣ್ಣಿಸಿದರು.

ಶತಮಾನೋತ್ಸವ ಸಮಿತಿ ಅಧ್ಯಕ್ಷ ಹಾಗೂ ವಿಧಾನಪರಿಷತ್‌ನ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಶಾಲಾ ಆರಂಭದ ದಿನಗಳಲ್ಲಿ 300ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಪ್ರಸ್ತುತ 1 ರಿಂದ 7ನೇ ತರಗತಿವರೆಗೆ ಕೇವಲ 21 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಹೀಗಾಗಿ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಹೋಬಳಿ ಮಟ್ಟದಲ್ಲಿರುವ ಶತಮಾನ ಕಂಡ ಶಾಲೆಯನ್ನು ಉಳಿಸಿಕೊಳ್ಳಲು ಎಲ್ಲರೂ ಪಣ ತೊಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರು ಮತ್ತು ವರ್ಗಾವಣೆಗೊಂಡ ಶಿಕ್ಷಕರುಗಳನ್ನು, ಅತಿಥಿ ಶಿಕ್ಷಕರುಗಳಾಗಿ ದುಡಿದವರನ್ನು ಶತಮಾನೋತ್ಸವ ಸಮಿತಿ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಉದ್ಯಮಿಗಳಾದ ಹರಪಳ್ಳಿ ರವೀಂದ್ರ, ಬೆಂಗಳೂರಿನ ಮೋಹನ್‌ಕುಮಾರ್, ಶತಮಾನೋತ್ಸವ ಸಮಿತಿ ಉಪಾಧ್ಯಕ್ಷ ಕೆ.ಎಂ.ಲೋಕೇಶ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಶಾಂತಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ವಿಜಯ್, ತಹಸೀಲ್ದಾರ್ ಕೃಷ್ಣಮೂರ್ತಿ, ಎಸ್‌ಡಿಎಂಸಿ ಅಧ್ಯಕ್ಷ ಗುರುಪ್ರಸಾದ್, ಶಾಂತಳ್ಳಿ ಗ್ರಾಮಾಭಿವೃದ್ಧಿ ಮಂಡಳಿ ಅದ್ಯಕ್ಷ ಬಸವರಾಜು, ಯುವಕ ಸಂಘದ ಅಧ್ಯಕ್ಷ ಸಜನ್ ಮಂದಣ್ಣ, ದಾನಿಗಳಾದ ಚಂದ್ರಕಲಾ ರಾಮಚಂದ್ರ, ಹಳೆಯ ವಿದ್ಯಾರ್ಥಿಯಾದ ಸಬ್ ಇನ್‌ಸ್ಪೆಕ್ಟರ್ ಸೋನಿ, ಮೀನುಗಾರಿಕಾ ಇಲಾಖೆಯ ಹಿರಿಯ ಅಧಿಕಾರಿ ಕುಮಾರಸ್ವಾಮಿ, ಶಾಲೆಯ ಮುಖ್ಯಶಿಕ್ಷಕ ಪರಮೇಶ್ವರಪ್ಪ ಇದ್ದರು.

ಶತಮಾನೋತ್ಸವದ ಸವಿನೆನಪಿಗಾಗಿ ಹೊರತರುತ್ತಿರುವ ಸ್ಮರಣ ಸಂಚಿಕೆ ಶತಕದ ಅಂತರಂಗ ಸ್ಮರಣ ಸಂಚಿಕೆಯನ್ನು ಶಾಸಕ ಮಂತರ್‌ಗೌಡ ಅನಾವರಣಗೊಳಿಸಿದರು. ಸ್ಮರಣ ಸಂಚಿಕೆ ಸಮಿತಿ ಅಧ್ಯಕ್ಷ ಕೆ.ಎಂ.ಕೃಷ್ಣಕುಮಾರ್ ಇದ್ದರು. 100 ಕಳಸ ಹೊತ್ತ ಮಹಿಳೆಯರಿಂದ ಪೂರ್ಣಕುಂಭ ಮೆರವಣಿಗೆ ಗಮನ ಸೆಳೆಯಿತು. ಸಬ್ಬಮ್ಮದೇವಿ ತಂಡದಿಂದ ಆಕರ್ಷಕ ಸುಗ್ಗಿ ಕುಣಿತ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net