

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಷಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ-ಕಾಂಗ್ರೆಸ್ ನಡುವೆ ವಾಕ್ಸಮರ ಜೋರಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಚಿವರು ಹಾಗೂ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಪ್ರತಿಭಟನೆಯ ವೇಳೆ ಬಿಜೆಪಿಯ ವಿಧಾನಪರಿಷತ್ ಸದಸ್ಯ ಸಿಟಿ ರವಿ (CT Ravi) ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಅವರಿಗೆ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಲ್ಲೆ ಯತ್ನ ನಡೆದಿದೆ.
ಅಂಬೇಡ್ಕರ್ ಅವರ ಕುರಿತು ಅಮಿತ್ ಷಾ (Amit Shah) ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್-ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿಧಾನಪರಿಷತ್ ಸದಸ್ಯ ಸಿಟಿ ರವಿ (CT Ravi) ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಅವರಿಗೆ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಹೊರಬೀಳುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಚಿವರ ಬೆಂಬಲಿಗರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಇನ್ನೂ ಇದೇ ವೇಳೆ ಸಿಟಿ ರವಿ (CT Ravi) ಮೇಲೆ ಹಲ್ಲೆ ಯತ್ನ ಕೂಡ ನಡೆದಿದ್ದು, ಮಾರ್ಷಲ್ಗಳು ಮದ್ಯ ಪ್ರವೇಶಿಸಿದ ಕಾರಣ ಸಂಭಾವ್ಯ ಅನಾಹುತ ತಪ್ಪಿದೆ.
ಸುವರ್ಣಸೌಧದೊಳಗೆ ನುಗ್ಗಿದ್ದ ಕೆಲ ಕಾಂಗ್ರೆಸ್ ಕಾರ್ಯಕರ್ತರು ಸಿಟಿ ರವಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಹಲ್ಲೆಗೆ ಮುಂದಾಗಿದ್ದಾರೆ. ಕೂಡಲೇ ರಕ್ಷಣೆಗೆ ಧಾವಿಸಿದ ಮಾರ್ಷಲ್ಗಳು ರವಿ ಅವರನ್ನು ರಕ್ಷಿಸಿದ್ದಾರೆ. ಹಲ್ಲೆಗೆ ಮುಂದಾದ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ್ದು, ಸುವರ್ಣಸೌಧದ ಮೊಗಸಾಲೆಯಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ.
ಇನ್ನೂ ತಮ್ಮ ಮೇಲೆ ಹಲ್ಲೆ ಮಾಡಲು ಬಂದವರನ್ನು ಪೊಲೀಸರು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಸಿಟಿ ರವಿ ಪ್ರತಿಭಟನೆ ನಡೆಸುತ್ತಿದ್ದು, ಅವರಿಗೆ ಬಿಜೆಪಿ-ಜೆಡಿಎಸ್ ಸದಸ್ಯರು ಸಾಥ್ ನೀಡಿದ್ದಾರೆ. ನನ್ನ ಕೊಲೆ ಮಾಡುವುದಕ್ಕೆ ಸಂಚು ರೂಪಿಸಿಕೊಂಡು ಬಂದಿದ್ದಾರೆ. ಗೂಂಡಾ ರಾಜ್ಯ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದ ಸಿಟಿ ರವಿ, ನಾನು ಆ ರೀತಿ ಪದಬಳಕೆ ಮಾಡಿದ್ದನ್ನ ತೋರಿಸಿ ಎಂದು ಸಿಟಿ ರವಿ (CT Ravi) ಸವಾಲೆಸೆದಿದ್ದಾರೆ.
ಸದ್ಯ ಸುವರ್ಣಸೌಧದ ಒಳಗೆ ಹಾಗೂ ಹೊರಗೆ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಮುಂಜಾಗ್ರತ ಕ್ರಮ ವಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿವಾದ ಯಾವ ಹಂತ ತಲುಪಲಿದೆ ಎಂದು ಕಾದು ನೋಡಬೇಕಿದೆ.