

ಕೋಲಾರ: ಕೋಲಾರ ಜಿಲ್ಲೆ ಐಎಎಸ್, ಕೆಎಎಸ್ ಅಭ್ಯರ್ಥಿಗಳನ್ನು ಹೆಚ್ಚು ಹೊಂದಿದ್ದ ಜಿಲ್ಲೆ ಎಂಬ ಖ್ಯಾತಿ ಇತು.್ತ ಆದರೆ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗಿದ್ದು, ಜಿಲ್ಲೆಯ ಘನತೆ ಮರುಸ್ಥಾಪನೆಗೆ ಪ್ರಯತ್ನ ಸಹಕಾರಿಯಾಗಲಿದೆ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಹೇಳಿದರು.
ತಾಲೂಕಿನ ಮಂಗಸಂದ್ರದ ಬೆಂಗಳೂರು ಉತ್ತರ ವಿವಿ ಸ್ನಾತಕೋತ್ತರ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕುಲಪತಿಗಳ ಸಮ್ಮುಖದಲ್ಲಿ ಆದ ಒಪ್ಪಂದಕ್ಕೆ ಸಹಿ ಹಾಕಿ ಮಾತನಾಡಿ, ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡಲು ನಡೆಸಿದ ಪ್ರಯತ್ನದಲ್ಲಿ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ವಿದ್ಯಾರ್ಥಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಲಿದೆ ಎಂದರು.
ಒಪ್ಪಂದದಿಂದಾಗಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಇಚ್ಚಿಸುವ ಬೆಂಗಳೂರು ಉತ್ತರ ವಿವಿಯ ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್ ಸೌಲಭ್ಯ ಸಿಗಲಿದೆ ಎಂದು ತಿಳಿಸಿದರು.
ಇಂಡಿಯಾ ಫಾರ್ ಐಎಎಸ್ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಿದ್ದು, ಕಲಿಕೆಗೆ ಅಗತ್ಯವಾದ ಪಠ್ಯವಸ್ತು, ಕಲಿಕಾ ಸಾಮಾಗ್ರಿಗಳನ್ನು ಆನ್ಲೈನ್ ಮೂಲಕ ವಿದ್ಯಾರ್ಥಿಗಳಿಗೆ ತಲುಪಿಸಲಿದೆ ಎಂದು ತಿಳಿಸಿದರು.
ತಿಂಗಳಿಗೊಂದು ಪರೀಕ್ಷೆ ನಡೆಸಿ ಅದರಲ್ಲಿ ತೇರ್ಗಡೆಯಾಗುವ ವಿದ್ಯಾರ್ಥಿಗಳನ್ನು ಉಚಿತ ಕೋಚಿಂಗ್ಗೆ ಆಯ್ಕೆ ಮಾಡಿಕೊಂಡು ಉಚಿತ ತರಬೇತಿ ನೀಡುವ ಉದ್ದೇಶವನ್ನು ಸಂಸ್ಥೆ ಹೊಂದಿದೆ. ಜಿಲ್ಲೆಯ ವಿದ್ಯಾರ್ಥಿಗಳು ಪ್ರಯೋಜನ ಪಡೆಯಬೇಕು ಎಂದು ಸಲಹೆ ನೀಡಿದರು.
ಇಂಡಿಯಾ ಫಾರ್ ಐಎಎಸ್ ಸಂಸ್ಥೆಯ ಮುಖ್ಯಸ್ಥ ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸ್ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುವ ಆಶಯದೊಂದಿಗೆ ಈ ಪ್ರಯತ್ನ ನಡೆಸಿದ್ದು, ಕೋಲಾರ ಜಿಲ್ಲೆಯ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲು ಮುಂದೆ ಬರಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಕುಲಸಚಿವೆ ಪ್ರೊ.ಡಿ.ಕುಮುದಾ ಮತ್ತಿತರರು ಹಾಜರಿದ್ದರು.