

ನಂಜನಗೂಡು: ಶಾಸನ ಸಭೆಯಲ್ಲಿ ಭೂ ಸುಧಾರಣಾ ಕಾಯ್ದೆಯನ್ನು ಶಾಸಕರು ವಿರೋಧಿಸುವ ಮೂಲಕ ರೈತರ ಹಿತಾಸಕ್ತಿ ಕಾಪಾಡಲು ಮುಂದಾಗಬೇಕು ಎಂದು ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ನಂಜನಗೂಡಿನಲ್ಲಿ ಪ್ರತಿಭಟನೆ ನಡೆಸಿದರು.
ನಗರದ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ಜಮಾಯಿಸಿದ 100ಕ್ಕೂ ಹೆಚ್ಚು ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾಯ್ದೆ ತಿದ್ದುಪಡಿಯಿಂದ ಸಣ್ಣ ಹಿಡುವಳಿದಾರರು ಕೃಷಿಯಿಂದ ವಿಮುಖರಾಗುವ ಜತೆಗೆ ಕೃಷಿ ಸಂಸ್ಕೃತಿ ನಾಶಗೊಂಡು ಬಂಡವಾಳಶಾಹಿ ಸಂಸ್ಕೃತಿ ಬೆಳೆಯಲಿದೆ. ಆಹಾರೋತ್ಪಾದನೆಗೂ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಸ್ಥಳಕ್ಕಾಗಮಿಸಿದ ತಾ.ಪಂ.ಇಒ ಶ್ರೀಕಂಠರಾಜೇ ಅರಸ್ ಅವರಿಗೆ ಮನವಿ ಪತ್ರ ಹಸ್ತಾಂತರಿಸಿ ಪ್ರತಿಭಟನೆ ಅಂತ್ಯಗೊಳಿಸಲಾಯಿತು.
ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಶಿರಮಳ್ಳಿ ಸಿದ್ಧಪ್ಪ, ಕಾರ‌್ಯದರ್ಶಿ ಹೆಜ್ಜಿಗೆ ಪ್ರಕಾಶ್,ಬೊಕ್ಕಹಳ್ಳಿ ನಂಜುಂಡಸ್ವಾಮಿ, ಗುರುಲಿಂಗೇಗೌಡ, ತುಳಸಮ್ಮ,ಬಸವರಾಜು ಮತ್ತಿತರರು ಭಾಗವಹಿಸಿದ್ದರು.
ಒತ್ತುವರಿ ತೆರವುಗೊಳಿಸುವಂತೆ ಮನವಿ: ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ರಸ್ತೆನ್ನು ವ್ಯಕ್ತಿಯೊಬ್ಬರು ಅತಿಕ್ರಮಿಸಿಕೊಂಡಿದ್ದು, ಒತ್ತುವರಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ತಾಲೂಕಿನ ಶಿರಮಳ್ಳಿ ಗ್ರಾಮದ 20ಕ್ಕೂ ಹೆಚ್ಚು ಗ್ರಾಮಸ್ಥರು ತಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಗ್ರಾಮಸ್ಥ ಗುರುಸ್ವಾಮಿ ಮಾತನಾಡಿ, ವಾರದ ಹಿಂದೆ ಗ್ರಾಮಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು ಒತ್ತುವರಿ ತೆರವು ಮಾಡುವಂತೆ ವ್ಯಕ್ತಿಗೆ ಒಂದು ವಾರ ಕಾಲಾವಕಾಶ ನೀಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಈ ನಡುವೆ ಕಾರ್ಮಿಕರ ಕೊರತೆಯಿಂದ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದ್ದು, ಸಾರ್ವಜನಿಕರಿಗೆ ಅನನುಕೂಲವಾಗಲಿದೆ. ತಕ್ಷಣ ಸಂಬಂಧಪಟ್ಟವರು ಇತ್ತ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ತಾಪಂ ಇಒ ಶ್ರೀಕಂಠರಾಜೇ ಅರಸ್, ಪೊಲೀಸರ ಭದ್ರತೆ ಪಡೆದು ಒತ್ತುವರಿ ತೆರವುಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಸ್ಥಳೀಯರಾದ ಶಿರಮಳ್ಳಿ ಸಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು.